ನ್ಯೂಸ್

12ರಂದು ಸಿಎಂ ಭೇಟಿಗೆ ಸಿದ್ಧತೆ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ.12ರಂದು ಜಿಲ್ಲೆಗೆ ಭೇಟಿ ನೀಡಿ ನೂರಾರು ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವಸತಿ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.


ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳನ್ನೊಳಗೊಂಡ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಜಿಲ್ಲೆ ಪ್ರಗತಿಯ ದೃಷ್ಟಿಯಿಂದ ಬದಲಾವಣೆ ಕಾಣಲಿದೆ. 1500 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಕೆರೆಗಳ ಸಮಗ್ರ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲಾಗಿದೆ. ಯೋಜನೆಯಿಂದ ಪರಿಸರದ ಸಂರಕ್ಷಣೆ ಸಹ ಆಗಲಿದೆ ಎಂದರು.
ಜಿಲ್ಲೆಯಲ್ಲಿ ಇದೇ ಡಿ.12ರಂದು ನಿಗದಿಯಾಗಿರುವ ಮುಖ್ಯಮಂತ್ರಿ ಕಾರ್ಯಕ್ರಮಗಳಿಗೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಎಲ್ಲ ಅಗತ್ಯ ವ್ಯವಸ್ಥೆಗಳೊಂದಿಗೆ ಯಶಸ್ವಿಯಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.


ಮುಖ್ಯಮಂತ್ರಿ ಡಿ.12ರಂದು ಬೆಳಗ್ಗೆ 10.30 ಗಂಟೆಗೆ ನಗರದಲ್ಲಿ, ಮಧ್ಯಾಹ್ನ 12.30ಕ್ಕೆ ಹನೂರಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನೆರವೇರಲು ಕ್ರಮವಹಿಸುವಂತೆ ಸೂಚಿಸಿದರು.


ಫಲಾನುಭವಿಗಳನ್ನು ಕರೆತನ್ನಿ: ಸರ್ಕಾರದ ಸವಲತ್ತುಗಳನ್ನು ಫಲಾನುಭವಿಗಳಿಗೆ ನೀಡುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರೆತರಬೇಕು. ಹೀಗಾಗಿ, ಮೊದಲೇ ಫಲಾನುಭವಿಗಳ ಪಟ್ಟಿ ಮಾಡಿಕೊಂಡು ನಿಯೋಜಿತ ಅಧಿಕಾರಿ ಸಿಬ್ಬಂದಿ ಜತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಗತ್ಯ ಎಲ್ಲ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಕೈಗೊಳ್ಳಬೇಕೆಂದು ತಿಳಿಸಿದರು. ಜಿಲ್ಲೆಯ ಅಭಿವೃದ್ಧಿ ಸಂಬಂಧ ಶಕ್ತಿ ತುಂಬುವ ಕೆಲಸ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿ, ಸಿಬ್ಬಂದಿಗೆ ವಹಿಸಲಾಗಿರುವ ಕಾರ್ಯವನ್ನು ಆಸಕ್ತಿಯಿಂದ ನಿರ್ವಹಿಸಬೇಕು. ಮಹತ್ತರ ಕಾರ್ಯಕ್ರಮದಲ್ಲಿ ಎಲ್ಲರೂ ತೊಡಗಿಕೊಳ್ಳಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು ಎಂದರು.


ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್, ಜಿಪಂ ಸಿಇಒ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್‌ರಾಜ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌ಕುಮಾರ್ ಉಪಸ್ಥಿತರಿದ್ದರು.