ಗುಂಡ್ಲುಪೇಟೆ: ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭರವಸೆ ನೀಡಿದರು.
ತಾಲೂಕಿನ ಹೊರೆಯಾಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿ ಸ್ವೀಕರಿಸಿ ಮಾತನಾಡಿದರು. ತಾಲೂಕಿನಲ್ಲಿ ಕುಡಿಯುವ ನೀರು, ಗೃಹಲಕ್ಷ್ಮಿ ಯೋಜನೆಯಲ್ಲಿ ನೋಂದಣಿ, ವಸತಿ ಯೋಜನೆಯ ಫಲಾನುಭವಿಗಳಿಗೆ ಬಿಲ್ ವಿಳಂಬ ಸೇರಿದಂತೆ ನಾನಾ ಸಮಸ್ಯೆಗಳಿವೆ. ಮುಂದಿನ ದಿನಗಳಲ್ಲಿ ಅದಾಲತ್ ನಡೆಸಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪೂರ್ಣಗೊಳಿಸಲಾಗುವುದು. ಯೋಜನೆ ಸಂಬಂಧ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರ ಸದ್ಯ ಗ್ಯಾರಂಟಿ ಯೋಜನೆಗಳ ಜಾರಿಗೆ ಆದ್ಯತೆ ನೀಡಿದ್ದು, ನಂತರ ಉಳಿದ ಎಲ್ಲ ಸಮಸ್ಯೆಗಳತ್ತ ಗಮನಹರಿಸಲಿದೆ. ಇದಕ್ಕಾಗಿ ಪ್ರತಿ ದಿನವೂ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಂದುಕೊರತೆಗಳ ಸಭೆ ನಡೆಸಿ ಸಾರ್ವಜನಿಕರಿಂದ ದೂರು ಸ್ವೀಕರಿಸಿ ಕಾಲಮಿತಿಯಲ್ಲಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಹಸೀಲ್ದಾರ್ ರಮೇಶ್ ಬಾಬು, ತಾಪಂ ಇಒ ರಾಮಲಿಂಗಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಎಪಿಎಂಸಿ ಸದಸ್ಯ ಆರ್.ಎಸ್.ನಾಗರಾಜು, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮಾಜಿ ಸದಸ್ಯ ನೀಲಕಂಠಪ್ಪ, ಜಿಪಂ ಮಾಜಿ ಸದಸ್ಯರಾದ ಬಿ.ಎಂ.ಮುನಿರಾಜು, ಶಿವಸ್ವಾಮಿ ಇತರರು ಇದ್ದರು.