ನ್ಯೂಸ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ಚಾಮರಾಜನಗರ: ಕನಿಷ್ಠ ವೇತನ ಹಾಗೂ ಪಿಂಚಣಿ ನಿಗದಿ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುಂತೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಲಕ್ಷ್ಮೀ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿದ್ದರಾಜು ಮಾತನಾಡಿ, ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ 31,000 ರೂ. ಹಾಗೂ ಕನಿಷ್ಠ ಪಿಂಚಣಿ 6000 ರೂ. ನಿಗದಿಪಡಿಸಬೇಕು. ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾಗಾರರನ್ನು ನೇಮಿಸಬೇಕು. ಸೇವಾ ಹಿರಿತನವನ್ನು ಪರಿಶೀಲಿಸಿ ವೇತನ ಹೆಚ್ಚಳ ಮಾಡಬೇಕು. ತೀವ್ರ ಅನಾರೋಗ್ಯಕ್ಕೆ ತುತ್ತಾದ ನೌಕರರಿಗೆ ಆಸ್ಪತ್ರೆ ವೆಚ್ಚ ಭರಿಸಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ನೇಮಕಾತಿ ರದ್ದುಪಡಿಸಬೇಕು. ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುವ ನೌಕರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು. ನೀರುಗಂಟಿಗಳಿಗೆ ಮಲ್ಟಿಪರ್ಪಸ್ ಎಂದಿರುವುದನ್ನು ಕೈ ಬಿಟ್ಟು ನಿರ್ದಿಷ್ಟವಾದ ಕೆಲಸಗಳನ್ನು ನಿಗದಿಪಡಿಸಬೇಕು. ಆದಾಯಕ್ಕೆ ಅನುಗುಣವಾಗಿ ಕರ ವಸೂಲಿಗಾರರ ಹುದ್ದೆಗಳನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು, ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರ ಪರವಾದ ನೀತಿಗಳನ್ನು ಜಾರಿಗೆ ತರಬೇಕು. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ರೈತ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ನೀಡಬೇಕು. ರೈಲ್ವೇ, ವಿದ್ಯುತ್ ಸೇರಿದಂತೆ ಎಲ್ಲ ಕ್ಷೇತ್ರವನ್ನು ಖಾಸಗೀಕರಣ ಕೈಬಿಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಆರ್ಮುಂಗಂ, ಮುಖಂಡರುಗಳಾದ ಮಲ್ಲು, ತಾಲೂಕು ಅಧ್ಯಕ್ಷರಾದ ಕೃಷ್ಣ, ನಂದೀಶ್, ದೊರೆಸ್ವಾಮಿ, ರೇವಣ್ಣ, ಮಹೇಂದ್ರ, ಲೋಕೇಶ್, ಕೃಷ್ಣ ನಾಯಕ, ಶಂಕರನಾಯಕ, ಮಹದೇವಮ್ಮ, ಪಳನಿಸ್ವಾಮಿ, ಕಿಟ್ಟಿ ಇತರರು ಭಾಗವಹಿಸಿದ್ದರು.