ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಟಿಕೆಟ್ ವಿಚಾರ ಬಿಜೆಪಿ ಮತ್ತು ಜೆಡಿಎಸ್‌ಗೆ ಕಗ್ಗಂಟಾಗುವ ಲಕ್ಷಣಗಳು ಗೋಚರಿಸುತ್ತಿವೆ.
ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದ ಲೋಕಸಭೆಗೆ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ತೆರವಾಗಿದೆ. ಇನ್ನೇನು ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರೂ ಪಕ್ಷಗಳಲ್ಲಿ ಭರ್ಜರಿ ರಾಜಕೀಯ ಶುರುವಾಗಿದೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ ಚಿಹ್ನೆಯಿಂದಲೇ ಸ್ಪರ್ಧಿಸಲು ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್‌ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚನ್ನಪಟ್ಟಣಕ್ಕೆ ಪದೇ ಪದೆ ಭೇಟಿ ನೀಡಿ ಚುನಾವಣಾ ಆಖಾಡವನ್ನು ರಂಗೇರಿಸುತ್ತಿದ್ದಾರೆ. ಜತೆಗೆ ಉಭಯ ಪಕ್ಷಗಳಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ.
ಈ ನಡುವೆ ಟಿಕೆಟ್ ವಿಚಾರದಲ್ಲಿ ಬಿಜೆಪಿ ದೆಹಲಿ ಹೈಕಮಾಂಡ್‌ನ್ನೂ ಯೋಗೇಶ್ವರ್ ಭೇಟಿ ಮಾಡಿ ಬಂದಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ನಿರ್ಧಾರದ ಮೇಲೆ ಸಿ.ಪಿ.ಯೋಗೇಶ್ವರ್ ಭವಿಷ್ಯ ನಿರ್ಧಾರವಾಗಲಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಮಾಡಿಕೊಂಡ ಒಡಂಬಡಿಕೆಯಂತೆ ಜೆಡಿಎಸ್ ಪ್ರತಿನಿಧಿಸಿದ್ದ ಕ್ಷೇತ್ರವನ್ನು ಜೆಡಿಎಸ್‌ಗೇ ಬಿಟ್ಟುಕೊಡಬೇಕು ಎಂಬುದು ಜೆಡಿಎಸ್ ವಾದ. ಈ ಹಿಂದೆ ಮೇಲ್ಮನೆ ಚುನಾವಣೆಯಲ್ಲಿ ಇದೇ ಪದ್ಧತಿ ಅನುಸರಿಸಲಾಗಿತ್ತು. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಿ ಕೊನೆಯ ಹಂತದಲ್ಲಿ ಬದಲಿಸಿ ಜೆಡಿಎಸ್ ನೀಡಲಾಗಿತ್ತು. ಅದೇ ಮಾನದಂಡದಲ್ಲಿ ಚನ್ನಪಟ್ಟಣವನ್ನು ಜೆಡಿಎಸ್ ಉಳಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಹಾಗಾಗಿ ಸಿ.ಪಿ.ಯೋಗೇಶ್ವರ್‌ಗೆ ಎನ್‌ಡಿಎ ಟಿಕೆಟ್ ಅನುಮಾನ ಎನ್ನಲಾಗಿದೆ. ಎನ್‌ಡಿಎ ಟಿಕೆಟ್ ಸಿಗದೇ ಇದ್ದರೆ ಯೋಗೇಶ್ವರ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಗಳೂ ದಟ್ಟವಾಗಿವೆ.
ಇನ್ನು ಜೆಡಿಎಸ್‌ನಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಉತ್ಸುಕರಾಗಿದ್ದಾರೆ ಎನ್ನಲಾಗಿದೆ.
ಚನ್ನಪಟ್ಟಣ ಟಿಕೆಟ್ ವಿಚಾರದ ದಿನೇ ದಿನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವುದರಿಂದ ದೆಹಲಿ ಮಟ್ಟದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಶೀಘ್ರದಲ್ಲೇ ನಿರ್ಧಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.