ನ್ಯೂಸ್

ವಿಧಾನ ಪರಿಷತ್‌ ವಿಪಕ್ಷ ನಾಯಕನಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ: ಆಕಾಂಕ್ಷಿಯಾಗಿದ್ದ ಸಿಟಿ ರವಿ, ರವಿ ಕುಮಾರ್​ಗೆ ನಿರಾಸೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿ ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ಅವರು ನೇಮಕವಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ರಾಘವೇಂದ್ರ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.

ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಮಾಜಿ ಶಾಸಕ ಸಿ.ಟಿ.ರವಿ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿತ್ತು. ಆದರೆ ಇಲ್ಲಿಯವರೆಗೆ, ಪಕ್ಷವು ವಿಪಕ್ಷ ನಾಯಕನ ಸ್ಥಾನವನ್ನು ಅಧಿಕೃತಗೊಳಿಸಿಲ್ಲ. ಇದೀಗ ಮುಂಗಾರು ಅಧಿವೇಶನ ನಡೆಯುತ್ತಿರುವ ಮಧ್ಯ ಬಿಜೆಪಿ ಅಂತಿಮವಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಛಲವಾದಿ‌ ನಾರಾಯಣಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಠರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂ. ಗುಳುಂ , ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣೀ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

ಮಾನ್ಯ ಛಲವಾದಿ ನಾರಾಯಣ ಸ್ವಾಮಿಯವರನ್ನು ಆತ್ಮೀಯವಾಗಿ ಅಭಿನಂದಿಸಿ ಅವರನ್ನು ಆಯ್ಕೆಮಾಡಿದ ಪಕ್ಷದ ವರಿಷ್ಠ ಮಂಡಳಿಗೆ ಕೃತಜ್ಞತೆ ಸಲ್ಲಿಸುವೆ ಎಂದು ವಿಜಯೇಂದ್ರ ಅವರು ಬರೆದುಕೊಂಡಿದ್ದಾರೆ.