ಬೆಂಗಳೂರು: ಸಾಹಿತಿ, ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ನಿಸಾರ್ ಅಹ್ಮದ್ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಹಾಗೇ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರೂ ಕೂಡ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ನಿತ್ಯೋತ್ಸವ ಕವಿ, ಕನ್ನಡ ಕಾವ್ಯ ಜಗತ್ತಿಗೆ ನವೋಲ್ಲಾಸ ತಂದುಕೊಟ್ಟ ಉತ್ಸಾಹದ ಚಿಲುಮೆ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ಅವರ ನಿಧನದಿಂದ ತೀವ್ರ ಆಘಾತವಾಗಿದೆ. ಅವರ ಕುಟುಂಬಕ್ಕೆ, ಸಾರಸ್ವತ ಲೋಕಕ್ಕೆ ಇವರ ಅಗಲಿಕೆಯನ್ನು ಭರಿಸುವ ಶಕ್ತಿ ದೊರೆಯಲಿ. ಪ್ರೊ.ನಿಸಾರರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.