ಶಿವಮೊಗ್ಗವನ್ನು ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಆಯ್ಕೆ ಮಾಡುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಎನ್.ಗೋಪಿನಾಥ್, ವಸಂತ ಹೋಬಳಿದಾರ್, ರಾಮಾಜೋಯಿಸ್, ಜಿ.ವಿಜಯಕುಮಾರ್, ಬಿ.ಗೋಪಿನಾಥ್ ಇತರರಿದ್ದರು.  
ನ್ಯೂಸ್

ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಆಯ್ಕೆಮಾಡಿ

ಶಿವಮೊಗ್ಗ: ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದಡಿ ಶಿವಮೊಗ್ಗ ನಗರವನ್ನು ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಆಯ್ಕೆ ಮಾಡಲು ಒತ್ತಾಯಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ದೇಶದಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಶಿವಮೊಗ್ಗ ನಗರವನ್ನು ಯೋಜನೆಗೆ ಆಯ್ಕೆ ಮಾಡಬೇಕು ಎಂದು ಕೋರಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಆಹಾರ ಉತ್ಪಾದನೆ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು, ಈಗಾಗಲೇ ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಕೊಡುಗೆ ನೀಡುತ್ತಿದೆ. ರಾಜ್ಯದಿಂದ ಶಿವಮೊಗ್ಗವನ್ನು ಯೋಜನೆಗೆ ಆಯ್ಕೆ ಮಾಡಬೇಕು. ದೇವಕಾತಿಕೊಪ್ಪದಲ್ಲಿ ಕೈಗಾರಿಕೆಗೆ ಅವಶ್ಯವಿರುವ ಸೌಕರ್ಯ ಹಾಗೂ ಅನುಮತಿ ಒದಗಿಸಬೇಕು. ಸಿದ್ಲೀಪುರದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯು ವಾಯು, ರೈಲ್ವೆ ಹಾಗೂ ರಸ್ತೆ ಸಾರಿಗೆಯ ಉತ್ತಮ ಸೌಲಭ್ಯವಿದೆ. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳು ಹಾದು ಹೋಗಿವೆ. ಕೈಗಾರಿಕಾ ಕ್ಷೇತ್ರಕ್ಕೆ ಪೂರಕ ವಾತಾವರಣವಿದೆ. ಹೀಗಾಗಿ ಕೈಗಾರಿಕಾ ಸ್ಮಾರ್ಟ್ ಸಿಟಿ ರೂಪಿಸಲು ಒತ್ತು ನೀಡಬೇಕು ಎಂದು ಪದಾಧಿಕಾರಿಗಳು ಒತ್ತಾಯಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಪ್ರಮುಖರಾದ ರಾಮಾಜೋಯಿಸ್, ಹರ್ಷ ಕಾಮತ್, ಪ್ರದೀಪ್ ವಿ.ಎಲಿ ಇತರರಿದ್ದರು.