ನ್ಯೂಸ್

ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಘರ್ಷಣೆ: ಕೈ ಅಭ್ಯರ್ಥಿ ರೈ ಕಾರಿನ ಮೇಲೆ ಕಲ್ಲುತೂರಾಟ

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್​-ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ಉಂಟಾಗಿದ್ದು, ಕೈ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲುತೂರಾಟ ನಡೆದಿದೆ.

ಮುಲ್ಕಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಈ ಘರ್ಷಣೆ ನಡೆದಿದೆ. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ಬೂತ್​ಗೆ ಅಭ್ಯರ್ಥಿ ಮಿಥುನ್ ರೈ ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದರು. ಆಗ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಘರ್ಷಣೆ ಉಂಟಾಗಿ, ಹೊಯ್​ಕೈ ನಡೆದಿದೆ. ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಭೇಟಿ ನೀಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ಸ್ಥಳದಲ್ಲಿ ಕೆಎಸ್​ಆರ್​ಪಿ ತುಕಡಿ ನಿಯೋಜಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಂತೆ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ.