ನವದೆಹಲಿ: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ದಿನೇದಿನೆ ಕುತೂಹಲ ಹೆಚ್ಚಾಗುತ್ತಿದೆ. ಆಕಾಂಕ್ಷಿಗಳಂತೂ ತುದಿಗಾಲಲ್ಲಿ ನಿಂತಿದ್ದು, ಸಂಪುಟ ಸೇರ್ಪಡೆಯ ಅದೃಷ್ಟ ಯಾರಿಗೆ ಒಲಿಯುವುದೋ ಎಂಬ ತವಕದಲ್ಲಿದ್ದಾರೆ. ಈ ನಡುವೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವದೆಹಲಿಗೆ ತೆರಳಿ ವರಿಷ್ಠರ ಜತೆ ಸಂಪುಟ ವಿಸ್ತರಣೆ ಕುರಿತ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಇಂದು ಸಂಜೆ ಬಿಗ್ ಬ್ರೇಕಿಂಗ್ ನ್ಯೂಸ್ ಕೊಡುವ ಸುಳಿವು ನೀಡಿದ್ದಾರೆ.
ನವದೆಹಲಿಯ ಕರ್ನಾಟಕ ಭವನ-1 ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನ ಮಂಡಲದ ಅಧಿವೇಶನದ ಪ್ರಾರಂಭವಾಗುವ ಮುನ್ನವೇ ಸಂಪುಟ ವಿಸ್ತರಣೆ ಮಾಡಬೇಕೆಂಬುದು ತಮ್ಮ ಅಪೇಕ್ಷೆಯಾಗಿದೆ. ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಜತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ, ಶುಕ್ರವಾರ ಸಮಾಲೋಚನೆ ನಡೆಸಲಾಗಿದೆ. ಪಕ್ಷದ ರಾಷ್ಟ್ರಾಧ್ಯಕ್ಷರು ಪ್ರಧಾನಿ ಜೊತೆಗೆ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ ಸಾಧ್ಯತೆ ಇದೆ. ಅಲ್ಲಿಂದ ಗ್ರೀನ್ ಸಿಗ್ನಲ್ ಸಿಕ್ಕ ಕೂಡಲೇ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದರು.
ಇದನ್ನೂ ಓದಿ: ಸಿಸಿಬಿ ಕಚೇರಿಗೆ ಬಂದ ಅಕುಲ್, ಕರ್ನಾಟಕದ ಜನತೆಗೆ ನಮಸ್ಕಾರಗಳು… ಎನ್ನುತ್ತ ಸ್ಫೋಟಕ ಮಾಹಿತಿ ಹೊರಹಾಕಿದ್ರು
ದೆಹಲಿ ಭೇಟಿ ಅತ್ಯಂತ ಯಶಸ್ವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಬಹುತೇಕ ಬೇಡಿಕೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಹಸಿರು ನಿಶಾನೆ ದೊರೆಯಲಿದೆ ಎಂಬ ವಿಶ್ವಾಸ ತಮ್ಮಲ್ಲಿದೆ. ರಾಜ್ಯದ ವಿವಿಧ ಯೋಜನಗೆಳ ಕುರಿತು ಅನುಮೋದನೆ ಹಾಗೂ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನೂ ಕೂಡಾ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಎಲ್ಲರೂ ಕೂಡಾ ರಾಜ್ಯದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ದೆಹಲಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎಂದು ಯಡಿಯೂರಪ್ಪ ಬಣ್ಣಿಸಿದರು.