ಸರ್ಕಾರದ ಪರವಾಗಿ ಸಮರ್ಪಕವಾಗಿ ವಾದ ಮಾಡಲು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ. ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳಿಗೆ CM ಸಿದ್ದರಾಮಯ್ಯ ಸೂಚನೆ ನೀಡಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಸಿದ ಪ್ರಗತಿ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆಯಲ್ಲಿ ಮಾತನಾಡಿದರು.
ಸರ್ಕಾರದ ಕಾನೂನುಗಳನ್ನು ಎಲ್ಲಾ ಹಂತಗಳಲ್ಲಿ ಎತ್ತಿ ಹಿಡಿಯುವುದು ನಿಮ್ಮ ಕರ್ತವ್ಯ. ಕರ್ನಾಟಕ ರಾಜ್ಯ ಅಧಿನಿಯಮಗಳ ಸಂಪೂರ್ಣ ಅನುಷ್ಠಾನ, ಉದ್ದೇಶದ ನಿರ್ವಹಣೆ ನಿಮ್ಮ ಕೈಯಲ್ಲಿದೆ. ನೀವೆಲ್ಲರೂ ಹಿರಿಯ ನ್ಯಾಯವಾದಿಗಳಿದ್ದೀರಿ. ಸರ್ಕಾರದ ಆದ್ಯತೆಗಳನ್ನು ಕಾಪಾಡುವುದು ನಿಮ್ಮೆಲ್ಲರ ಜವಾಬ್ದಾರಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದರು.
ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಸರ್ಕಾರದ ಪರವಾಗಿ ಆದೇಶಗಳು ಬರುತ್ತಿಲ್ಲ ಯಾಕೆ? ಅನೇಕ ಪ್ರಕರಣಗಳಲ್ಲಿ ಸರ್ಕಾರದ ವಿರುದ್ಧ ಯಾಕೆ ಸುಲಭವಾಗಿ ತಡೆಯಾಜ್ಞೆ ದೊರೆಯುತ್ತದೆ? ತಡೆಯಾಜ್ಞೆಯನ್ನು ವರ್ಷಗಟ್ಟಲೆ ತೆರವುಗೊಳಿಸದೆ ಇಡುವ ಪ್ರಕರಣಗಳು ಯಾಕೆ ಹೆಚ್ಚಾಗುತ್ತಿವೆ? ಸರ್ಕಾರದ ವಿರುದ್ಧದ ತಡೆಯಾಜ್ಞೆ ಪ್ರಕರಣಗಳನ್ನು ಆದಷ್ಟು ಬೇಗನೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಸಂಪೂರ್ಣ ಸಿದ್ಧತೆಯೊಂದಿಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬೇಕು. ಮೆರಿಟ್ ಇರುವ ಪ್ರಕರಣಗಳಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಲು ಅವಕಾಶ ನೀಡಬಾರದು. ಪ್ರತಿಯೊಂದು ಪ್ರಕರಣಗಳನ್ನು ಸವಾಲಿನಿಂದ ಸ್ವೀಕರಿಸಿ, ಕಾರ್ಯ ನಿರ್ವಹಿಸಿದರೆ ಸರ್ಕಾರಕ್ಕೆ ಉತ್ತಮ ಹೆಸರು ಬರಲು ಸಾಧ್ಯವಿದೆ. ನಿಮ್ಮಿಂದ ಹೆಚ್ಚಿನ ಕ್ರಿಯಾಶೀಲ ಕಾರ್ಯನಿರ್ವಹಣೆಯನ್ನು ಸರ್ಕಾರ ಅಪೇಕ್ಷಿಸುತ್ತದೆ. ಇಲಾಖೆಗಳಿಂದ ಅಥವಾ ಅಧಿಕಾರಿಗಳಿಂದ ಸರಿಯಾಗಿ ಸ್ಪಂದನೆ ದೊರೆಯದಿದ್ದರೆ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದುರು.