ಬೆಂಗಳೂರು: ರಾಜ್ಯದ್ಯಂತ ತುಂಬಾ ಚರ್ಚೆಗೆ ಗ್ರಾಸವಾಗಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸ್ಸು ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು 14ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆದಿರುವುದಾಗಿ ಘೋಷಣೆ ಮಾಡಿದರು. ಹಿಂದಿನ ಸರ್ಕಾರವು ಎ.ಪಿ.ಎಂ.ಸಿ. ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸದೃಢ ಮಾರುಕಟ್ಟೆ ಜಾಲವನ್ನು ದುರ್ಬಲಗೊಳಿಸಿ ಎ.ಪಿ.ಎಂ.ಸಿ ಗಳ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ರೈತರ ಬದುಕಿನ ಅನಿಶ್ಚಿತತೆಗೆ ಕಾರಣವಾಗಿದೆ. ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯ ಮೊದಲು, 2018-19 ರಲ್ಲಿ ರಾಜ್ಯದ 167 ಕೃಷಿ ಉತ್ಪನ್ನ ಮಾರುಕಟ್ಟೆಗಳ ಒಟ್ಟು ಆದಾಯ 570 ರಿಂದ 600 ಕೋಟಿ ರೂ. ಗಳಷ್ಟಿದ್ದು, 2022-23 ರಲ್ಲಿ ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿಯ ನಂತರ ಕೇವಲ 193 ಕೋಟಿ ರೂ.ಗಳಿಗೆ ಕುಸಿದಿದೆ. ಅಲ್ಲದೆ, ಮುಕ್ತ ಮಾರುಕಟ್ಟೆಯಲ್ಲಿ ಖಾಸಗಿ ಸಂಸ್ಥೆಗಳು ರೈತರನ್ನು ವಂಚಿಸಿದ, ಶೋಷಣೆಗೆ ಒಳಪಡಿಸಿದ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದಿವೆ. ಈ ಅವ್ಯವಸ್ಥೆಯನ್ನು ಸರಿಪಡಿಸಿ ರೈತರ ಹಿತರಕ್ಷಣೆ ಮಾಡಲು ನಮ್ಮ ಸರ್ಕಾರವು ಸದರಿ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿದೆ.
ಕೇಂದ್ರ ಸರ್ಕಾರದ ಸಲಹೆಯಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಪಿಎಂಸಿ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಈ ಕಾಯ್ದೆಗೆ ಭಾರೀ ವಿರೋಧವೂ ವ್ಯಕ್ತವಾಗಿತ್ತು. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಸದನದಲ್ಲೂ ಮಂಡಿಸಲಾಗಿತ್ತು.
ಖಾಸಗಿ ವ್ಯಾಪಾರಿಗಳು ರೈತರಿಂದ ನೇರವಾಗಿ ಬೆಳೆ ಖರೀದಿಸಲು ಅವಕಾಶ ನೀಡುವ, ಎಪಿಎಂಸಿಯ ಚೌಕಟ್ಟಿನ ಹೊರಗೂ ವ್ಯವಹಾರ ನಡೆಸಬಹುದಾದ ಕಾಯ್ದೆಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಅದೇ ಪ್ರಕಾರ ರಾಜ್ಯದಲ್ಲೂ ಜಾರಿ ಮಾಡಲಾಗಿತ್ತು. ಆದರೆ, ದೇಶದ ಕೆಲವು ಕಡೆಗಳಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಈ ವಿಧೇಯಕವನ್ನು ಕೇಂದ್ರ ಹಿಂಪಡೆದಿತ್ತು. ರಾಜ್ಯ ಸರ್ಕಾರ ಮಾತ್ರ ಹಿಂಪಡೆದಿರಲಿಲ್ಲ. ಇದೀಗ ಎಪಿಎಂಪಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಬಜೆಟ್ನಲ್ಲಿ ಸಿದ್ದರಾಮಯ್ಯ ಅವರು ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಿದ್ದಾರೆ. ಅಲ್ಲದೆ, ಗುಡ್ಡಗಾಡು ಪ್ರದೇಶದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದು ಘೋಷಣೆ ಮಾಡಿದರು.