ಮೈಸೂರು: ಆರ್ಸಿಬಿ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, "ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ನವರ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ. ಅಂತೆಯೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮ ಆಯೋಜನೆಗೆ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಷರತ್ತುಬದ್ಧ ಅನುಮತಿ ನೀಡಲಾಗಿತ್ತು" ಎಂದರು.
"ವಿಧಾನಸೌಧದ ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮ ನಡೆಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಡಿಪಿಎಆರ್ನಿಂದ ಷರತ್ತುಬದ್ದ ಅನುಮತಿ ನೀಡಲಾಗಿತ್ತು. ಷರತ್ತುಗಳನ್ನು ಪಾಲಿಸಿ, ಕಾರ್ಯಕ್ರಮವನ್ನು ಆಯೋಜಿಸುವುದು ಪೊಲೀಸರ ಕರ್ತವ್ಯವಾಗಿತ್ತು. ಈ ಅನುಮತಿ ವಿಧಾನಸೌಧದ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು, ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ" ಎಂದರು.
"ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆ ಸಂಭವಿಸಿದೆ. ಅದಕ್ಕೆ ಪೊಲೀಸರು ಸಮರ್ಪಕವಾಗಿ ಇಲ್ಲಿ ಭದ್ರತೆ ಒದಗಿಸಬೇಕಿತ್ತು. ಆದರೆ, ಖಾಕಿ ವ್ಯವಸ್ಥೆ ಸಮರ್ಪಕವಾಗಿರದಿದ್ದ ಕಾರಣ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ" ಎಂದು ಹೇಳಿದರು.
"ಕಾರ್ಯಕ್ರಮದ ಸ್ಥಳದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ಮಾಹಿತಿ ಕೊಟ್ಟಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಸರ್ಕಾರಿ ಕಾರ್ಯಕ್ರಮವಾಗಿರಲಿಲ್ಲ ಹಾಗೂ ಇದಕ್ಕೆ ನನಗೆ ಆಹ್ವಾನವೂ ಇರಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ನವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಮಧ್ಯಾಹ್ನ 3.50ಕ್ಕೆ ಗಾಯಗೊಂಡವರು ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ, ನನಗೆ ಸಂಜೆ 5.45ಕ್ಕೆ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿ, ಜನರು ಮೃತಪಟ್ಟಿರುವ ಮಾಹಿತಿ ದೊರೆಯಿತು. ಕಾಲ್ತುಳಿತದ ಘಟನೆ ಘಟಿಸಬಾರದಿತ್ತು. ಬಹಳ ಬೇಸರ ತಂದಿದೆ" ಎಂದರು.
"ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ. ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ. ಉತ್ತರಪ್ರದೇಶದ ಕುಂಭಮೇಳದ ಸೇತುವೆ ಬಿದ್ದ ಪ್ರಕರಣದಲ್ಲಿ ಜನರು ಮೃತ್ತಪಟ್ಟ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ರಾಜಿನಾಮೆ ನೀಡಿದರೇ? ಬಿಜೆಪಿ ಹಾಗೂ ಜೆಡಿಎಸ್ನವರು ಅಲ್ಲಿನ ಮುಖ್ಯಮಂತ್ರಿಗಳ ರಾಜಿನಾಮೆ ಕೇಳಿದರೇ?" ಎಂದು ಮರುಪ್ರಶ್ನಿಸಿದರು.