ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿ ಹಲವಾರು ವಿದ್ಯಮಾನಗಳು ನಡೆಯುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದೀಗ ತಮ್ಮ ಸಂಪುಟದ ಸದಸ್ಯರಿಗೆ ಸೂಚನೆಯೊಂದನ್ನು ನೀಡಿದ್ದಾರೆ.
ಯಾರು ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ. ಕೋವಿಡ್ ಸಾಂಕ್ರಾಮಿಕದಿಂದ ಜನರು ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಬಿಜೆಪಿಯ ಎಲ್ಲ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.
ಶಾಸಕ ಎಂ.ಪಿ. ರೇಣುಕಾಚಾರ್ಯ ಸಹಿ ಸಂಗ್ರಹ ಬೆನ್ನಲ್ಲೇ ಸಿಎಂ ಈ ಸೂಚನೆಯನ್ನು ನೀಡಿದ್ದಾರೆ. ಕೋವಿಡ್ ಸಂಕಷ್ಟ ಸಮಯದಲ್ಲಿ ಜನರ ಜತೆ ಇರಿ. ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ಕೊಡಿ, ಸಂಕಷ್ಟದಲ್ಲಿ ಇರುವ ಜನರಿಗೆ ನೆರವಾಗಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.