ಬೆಂಗಳೂರು: ರಾಜ್ಯದಲ್ಲಿ ವನ್ಯ ಜೀವಿಗಳ ಕಳ್ಳಬೇಟೆ, ಅರಣ್ಯ ಒತ್ತುವರಿ ಮತ್ತು ಅರಣ್ಯ ಸಂಪತ್ತು ದೋಚುವವರ ಮೇಲೆ ಸದಾಕಾಲ ಕಣ್ಗಾವಲು ಸಲುವಾಗಿ ‘ಕೇಂದ್ರೀಕೃತ ಕಮಾಂಡ್ ಸೆಂಟರ್’ ಸ್ಥಾಪಿಸುವ ಮೂಲಕ ಅರಣ್ಯ ಸಂಪತ್ತಿಗೆ ಹೈಟೆಕ್ ಭದ್ರತೆ ಕೊಡಲು ಅರಣ್ಯ ಇಲಾಖೆ ಯೋಜನೆ ರೂಪಿಸಲು ಮುಂದಾಗಿದೆ.
ವಿಕಾಸಸೌಧದಲ್ಲಿ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ, ಹಿರಿಯ ಅಧಿಕಾರಿಗಳ ಜತೆಗೆ ಈ ಸಲುವಾಗಿ ಸಭೆ ನಡೆಸಿದರು. ರಾಜ್ಯದಲ್ಲಿ 40 ಸಾವಿರ ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಭೌತಿಕವಾಗಿ ಕಾವಲು ಕಾಯುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಅಕ್ರಮ ತಡೆಯುವುದು ಕ್ಲಿಷ್ಟಕರವಾಗಿದೆ. ಆದರಿಂದ ಕೃತಕ ಬುದ್ಧಿಮತ್ತೆ, ಡ್ರೋನ್ ಕ್ಯಾಮರಾ, ಕಾಡಿನಂಚಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಆ ಎಲ್ಲ ಕ್ಯಾಮರಾಗಳ ದೃಶ್ಯಗಳ ಆಧಾರದಲ್ಲಿ ವನ್ಯಮೃಗ ಮತ್ತು ಕಳ್ಳಬೇಟೆಗಾರರ ಚಲನವಲನದ ಬಗ್ಗೆ ನಿಗಾ ಇಡಲು ಕೇಂದ್ರೀಕೃತ ಕಮಾಂಡ್ ಸೆಂಟರ್ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಾಡಿನಂಚಿನ ಗ್ರಾಮಗಳ ಜನರೊಂದಿಗೆ ಅರಣ್ಯಾಧಿಕಾರಿಗಳು ಸೌಹಾರ್ದಯುತ ಸಂಬಂಧ ಹೊಂದಬೇಕು. ಅರಣ್ಯ ಮತ್ತು ವನ್ಯಜೀವಿಗಳ ಮಹತ್ವ ತಿಳಿಸಿಕೊಡಬೇಕು. ಅಲ್ಲಿನ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಬೇಕು, ಕೌಶಲ ತರಬೇತಿ ಕೊಡಿಸಬೇಕು. ಆಗ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಗೆ ಸ್ಥಳೀಯರೇ ಮುಂದಾಗುತ್ತಾರೆ. ಈ ರೀತಿಯ ವಾತಾವರಣ ಸೃಷ್ಟಿಸಲು ಇಲಾಖೆಯಿಂದ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಖಾಲಿ ಹುದ್ದೆಗಳ ನೇಮಕ ಶೀಘ್ರ
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿ ಮಾಡಿ ಕೂಡಲೇ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಬೇಕು. ತಕ್ಷಣ ಅಗತ್ಯ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಮತ್ತು ವನ, ವನ್ಯಜೀವಿ ಸಂರಕ್ಷಣೆಗೆ ಅಗತ್ಯ ವಾಹನ, ಉಪಕರಣಗಳ ಖರೀದಿಗೆ ಪ್ರಸ್ತಾವನೆ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಖಂಡ್ರೆ ಕಟ್ಟಾಜ್ಞೆ ಮಾಡಿದರು.
ಎಂಎಂ ಹಿಲ್ಸ್ ಹುಲಿ ಸಂರಕ್ಷಿತ ಪ್ರದೇಶ?
ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚುತ್ತಿದೆ. ಈ ಕಾನನವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸಚಿವರು ತಿಳಿಸಿದರು. ಎಂಎಂ ಹಿಲ್ಸ್ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡಲು ಕ್ರಮವಹಿಸುವಂತೆ ಮತ್ತು ಜವಾಬ್ದಾರಿಯುತರ ಸಭೆ ಕರೆದು ಚರ್ಚಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ರಾಜ್ಯದಲ್ಲಿ ವನ್ಯಜೀವಿಗಳ ಅಸಹಜ ಸಾವು ನಿಯಂತ್ರಿಸಲು ಮತ್ತು ವನ್ಯಮೃಗಗಳ ದಾಳಿಯಿಂದ ಅಮೂಲ್ಯ ಜೀವಹಾನಿ ತಡೆಯಲು ಆಯಾ ವಲಯದ ಅಧಿಕಾರಿ, ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುವಂತೆ ನಿರ್ದೇಶನ ನೀಡಿದರು.