ನಂಜನಗೂಡು: ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿನ ಆನ್‌ಲೈನ್ ಸೇವೆಗಳು ಹಾಗೂ ಅಂಗನವಾಡಿ ಕಾರ್ಯಕರ್ತರ ದೈನಂದಿನ ಸೇವಾ ಕಾರ್ಯಗಳಿಗೆ ನೆರವಾಗುವಂತೆ ಸ್ಮಾರ್ಟ್ ಫೋನ್ ನೀಡಲಾಗುತ್ತಿದ್ದು, ಮೊದಲ ಹಂತದಲ್ಲಿ ನಂಜನಗೂಡು ಮತ್ತು ಬಿಳಿಗೆರೆ ವ್ಯಾಪ್ತಿಯ 400 ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್‌ಗಳನ್ನು ವಿತರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಯಂತೆ ಗ್ರಾಚ್ಯುಟಿ ಸೌಲಭ್ಯ ನೀಡಲು ಸರ್ಕಾರ ಕ್ರಮ ವಹಿಸಿದೆ. ಜತೆಗೆ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು ಹಾಗೂ ಕೇಂದ್ರಗಳಲ್ಲಿ ಮಕ್ಕಳಿಗೆ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.
ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಹೊಸ ತಂತ್ರಜ್ಞಾನಗಳಿಗೆ ಕಾರ್ಯಕರ್ತೆಯರು ತೆರೆದುಕೊಂಡು ಸೇವಾ ಕಾರ್ಯದಲ್ಲಿ ಉನ್ನತಿ ಸಾಧಿಸಲಿ ಎಂಬ ಆಶಯದಿಂದ, ಪ್ರತಿ ಕಾರ್ಯಕರ್ತೆಯರಿಗೆ 12.5 ಸಾವಿರ ರೂ. ಬೆಲೆಯ ಸ್ಮಾರ್ಟ್ ಫೋನ್‌ಗಳನ್ನು ವಿತರಣೆ ಮಾಡಲಾಗಿದೆ. ಸಿಬ್ಬಂದಿ ದಿನ ನಿತ್ಯದ ಕಚೇರಿ ಕಾರ್ಯಗಳನ್ನು ಸುಲಭಗೊಳಿಸುವಲ್ಲಿ ನೆರವಾಗಲಿದ್ದು, ಮುಂಬರುವ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಅಗತ್ಯ ನೆರವು ಒದಗಿಸಲು ಬದ್ಧನಾಗಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್, ತಾಲೂಕು ಪಂಚಾಯಿತಿ ಇಒ ಜೆರಾಲ್ಡ್ ರಾಜೇಶ್, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜ್, ಹಾಡ್ಯ ರಂಗಸ್ವಾಮಿ. ಸಿಡಿಪಿಒಗಳಾದ ಮಂಜುಳಾ ಹಾಗೂ ಭವ್ಯಶ್ರೀ ಉಪಸ್ಥಿತರಿದ್ದರು.