ಜೈಪುರ: ಮುಂಬರುವ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.
ರಾಜಸ್ಥಾನದ ಕರಣ್ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ (75) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೂತ್ರಪಿಂಡ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು, ಗುರ್ಮೀತ್ ಸಿಂಗ್ ಅವರು ಬಹುಕಾಲದಿಂದ ಅಧಿಕ ರಕ್ತದೊತ್ತಡ ಹಾಗೂ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.
ಗುರ್ಮೀತ್ ಸಿಂಗ್ ಅವರ ನಿಧನವನ್ನು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ಖಚಿತಪಡಿಸಿದ್ದು, ಅಧಿಕೃತವಾಗಿ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.