ಜಿಲ್ಲಾಧಿಕಾರಿ ಕಚೇರಿ ಎದುರು ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಸಂವಿಧಾನ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಿಸಿದರು. 
ನ್ಯೂಸ್

ಜನರ ಆಶೋತ್ತರಗಳಿಗೆ ಸಂವಿಧಾನ ಪೂರಕ

ನವೀನ ಬಿ.ಎಂ

ಶಿವಮೊಗ್ಗ: ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಳಗೊಂಡಿರುವ ಪ್ರಗತಿಶೀಲ ರಾಷ್ಟ್ರ ಭಾರತ ಶ್ರೇಷ್ಟ ಸಂವಿಧಾನ ಹೊಂದಿದ್ದು, ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಪೂರಕವಾಗಿದೆ. ಪ್ರತಿ ವಿಷಯ ಹಾಗೂ ಕ್ಷೇತ್ರಗಳಲ್ಲಿ ಪ್ರಜಾಪ್ರಭುತ್ವದ ಆಶಯವನ್ನು ಎತ್ತಿಹಿಡಿಯಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರದ ಸೂಚನೆಯಂತೆ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿಯೂ ಪ್ರಜಾಪ್ರಭುತ್ವದ ದಿನವನ್ನು ಆಚರಿಸಲಾಗುತ್ತಿದೆ. ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಪೀಠಿಕೆಯನ್ನು ಮಾತ್ರವಲ್ಲ, ಪೂರ್ಣ ಸಂವಿಧಾನವನ್ನೇ ಓದುವ ಮೂಲಕ ಅರ್ಥೈಸಿಕೊಂಡು ಸಂವಿಧಾನದ ಆಶಯಕ್ಕೆ ಪೂರಕವಾಗಿ ನಡೆದುಕೊಳ್ಳಬೇಕಾದ ಅಗತ್ಯವಿದೆ. ಇದರಿಂದ ದೇಶದ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ ಎಂದರು.
ಮೇಯರ್ ಎಸ್.ಶಿವಕುಮಾರ್, ಮುಖಂಡರಾದ ವೈ.ಎಚ್.ನಾಗರಾಜ್, ಎಂ.ಗುರುಮೂರ್ತಿ, ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಎಎಸ್ಪಿ ಅನಿಲ್‌ಕುಮಾರ್ ಭೂಮರಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ ಉಪಸ್ಥಿತರಿದ್ದರು.

ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ

ಕಾರ್ಯಕ್ರಮಕ್ಕೂ ಮುನ್ನ ಮಹಾನಗರಪಾಲಿಕೆಯ ಆವರಣದಲ್ಲಿರುವ ಡಾ. ಅಂಬೇಡ್ಕರ್ ಅವರು ಪುತ್ಥಳಿಗೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಪುಷ್ಪನಮನ ಸಲ್ಲಿಸಿದರು. ನಂತರ ಸಹಸ್ರಾರು ವಿದ್ಯಾರ್ಥಿಗಳು ಹಾಗೂ ಕಲಾತಂಡಗಳೊಂದಿಗೆ ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂತಿಮವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಂಪನ್ನಗೊಂಡಿತು.