ಬೆಂಗಳೂರು: ಕೊಡಗಿನ ಕನ್ನಡ ಮಠದ ವ್ಯಾಪ್ತಿಗೆ ಒಳಪಟ್ಟ ದೇವಸ್ಥಾನಗಳ ದೈನಂದಿನ ಕಾರ್ಯನಿರ್ವಹಣೆಗೆ ತಸ್ತೀಕ್ ಪಾವತಿಸುವ ಮನವಿ ಪರಿಗಣಿಸಲು ಸೂಚಿಸಿ ಹೈಕೋರ್ಟ್ ಹೊರಡಿಸಿದ್ದ ನಿರ್ದೇಶನ ಪಾಲಿಸದ ವಿಚಾರ ಸಂಬಂಧ ಕಂದಾಯ ಇಲಾಖೆ ಹಿಂದಿನ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಸೇರಿ ನಾಲ್ವರು ಅಧಿಕಾರಿಗಳಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಯಾಗಿದೆ.
ವಿರಾಜಪೇಟೆ ತಾಲೂಕಿನ ಕನ್ನಡ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಅರ್ಜಿ ಕುರಿತು ಕೆಲ ಕಾಲ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಾದ ಕಂದಾಯ ಇಲಾಖೆ ಹಿಂದಿನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಮುಜರಾಯಿ ಇಲಾಖೆ ಆಯುಕ್ತ ಎಂ.ವಿ. ವೆಂಕಟೇಶ್, ಕೊಡಗಿನ ಜಿಲ್ಲಾಧಿಕಾರಿ ವೆಂಕಟರಾಜ ಮತ್ತು ವಿರಾಜಪೇಟೆ ತಾಲೂಕಿನ ಹಿಂದಿನ ತಹಶೀಲ್ದಾರ್ ಎಚ್.ಎನ್. ರಾಮಚಂದ್ರ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನ.5ಕ್ಕೆ ಮುಂದೂಡಿದೆ.
ಕನ್ನಡ ಮಠದ ವ್ಯಾಪ್ತಿಗೆ ಒಳಪಟ್ಟ ದೇವಸ್ಥಾನಗಳ ದೈನಂದಿನ ಪೂಜಾ ಕೈಂಕರ್ಯಗಳ ನಿರ್ವಹಣೆಗೆ ತಸ್ತೀಕ್ ನೀಡುವ ಬಗ್ಗೆ ನಿರ್ದೇಶನ ನೀಡುವಂತೆ ಕೋರಿ ಶ್ರೀ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ 2023ರ ಜ.13ರಂದು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು 2023ರ ಸೆ.25ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ಮನವಿಯನ್ನು 8 ವಾರಗಳಲ್ಲಿ ಕಾನೂನು ಪ್ರಕಾರ ಪರಿಗಣಿಸಬೇಕು. ಆ ಕುರಿತು ಫಲಿತಾಂಶವನ್ನು ಅರ್ಜಿದಾರರಿಗೆ ತಿಳಿಸಬೇಕು ಎಂದು ಕಂದಾಯ , ಮುಜರಾಯಿ ಮತ್ತು ಕೊಡಗು ಜಿಲ್ಲಾಡಳಿತಕ್ಕೆ ನಿರ್ದೇಶಿಸಿತ್ತು. ಈ ಆದೇಶ ಪಾಲನೆ ಮಾಡಿಲ್ಲ ಎಂದು ಆಕ್ಷೇಪಿಸಿ ಇದೀಗ ಸ್ವಾಮೀಜಿ, ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.