ಶಿವಮೊಗ್ಗ: ದೇಶದ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಅಸಂಘಟಿತ ಕಾರ್ಮಿಕರ ಕೊಡುಗೆ ಅಪಾರ ಎಂದು ಎಂಎಲ್‌ಸಿ ಡಿ.ಎಸ್.ಅರುಣ್ ಹೇಳಿದರು.
ವಿನೋಬನಗರದ ವಿಧಾತ್ರಿ ಭವನದಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಎರಡನೇ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಕ್ಷೇತ್ರಗಳಲ್ಲೂ ಅಸಂಘಟಿತ ಕಾರ್ಮಿಕರು ಅನನ್ಯ ಕೊಡುಗೆ ನೀಡಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಮತ್ತು ವೃತ್ತಿ ಭದ್ರತೆ ನೀಡುವಲ್ಲಿ ಸರ್ಕಾರ ಮತ್ತು ಸಂಘಟನೆ ಕೈಜೋಡಿಸಬೇಕು ಎಂದರು.
ಜಿಲ್ಲಾ ಕೈಗಾರಿಕಾ ಸಂಘದ ಉಪಾಧ್ಯಕ್ಷ, ಉದ್ಯಮಿ ಹರ್ಷ ಕಾಮತ್ ಮಾತನಾಡಿ, ಅಸಂಘಟಿತ ಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅಸಂಘಟಿತ ಕಾರ್ಮಿಕರು ಅವರ ವೃತ್ತಿಯ ಬಗ್ಗೆ ಕೀಳರಿಮೆ ಬಿಡಬೇಕು. ಸಂಘ ಅವರಲ್ಲಿರುವ ಕೀಳರಿಮೆ ಹೋಗಲಾಡಿಸಿ ಅವರಿಗೆ ಆತ್ಮಸ್ಥೈರ್ಯ ತುಂಬಬೇಕು. ಈ ವೇದಿಕೆ ಮೂಲಕ ಅವರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದರು.
ಕ್ಷೇಮಾಭಿವೃದ್ಧಿ ಸಂಘ ಅಸಂಘಟಿತ ಕಾರ್ಮಿಕರ ಸಮಸ್ಯೆಗಳನ್ನು ದೂರ ಮಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಹಾಗೂ ದೇಶಕ್ಕೆ ಮಾದರಿಯಾಗಬೇಕು. ಸಾಮಾಜಿಕ ಭದ್ರತೆ ನೀಡಬೇಕು. ಈ ನಿಟ್ಟಿನಲ್ಲಿ ಇಂದಿನ ಸಭೆ ಮಾದರಿಯಾಗಬೇಕು ಎಂದು ಹೇಳಿದರು.
ಜಿಲ್ಲಾಧ್ಯಕ್ಷೆ ಸುರೇಖಾ ಪಾಲಾಕ್ಷಪ್ಪ, ಕಾರ್ಯದರ್ಶಿ ಪ್ರದೀಪ್ ಹೊನ್ನಪ್ಪ, ಕುಪೇಂದ್ರ ಆಯನೂರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಂಘದ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಇದ್ದರು.