ನವದೆಹಲಿ: ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿರುವ ದೆಹಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
2018ರಲ್ಲಿ ಹಿಂದೂ ದೇವತೆಯ ವಿರುದ್ಧದ 'ಆಕ್ಷೇಪಾರ್ಹ ಟ್ವೀಟ್'ಗೆ ಸಂಬಂಧಿಸಿದ ಪ್ರಕರಣದಲ್ಲಿ ಜುಬೇರ್ನನ್ನು ಬಂಧಿಸಲಾಗಿತ್ತು. ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಪೊಲೀಸ್ ಮನವಿಯನ್ನು ಅನುಮತಿಸಿ, ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
5 ದಿನಗಳ ಕಾಲ ಬಂಧನದ ಅವಧಿ ಮುಗಿದ ಹಿನ್ನಲೆಯಲ್ಲಿ ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಸದ್ಯ ಟ್ವೀಟ್ ಮಾಡಿದ್ದು ನಾನೇ ಎಂದು ಒಪ್ಪಿಕೊಂಡಿರುವ ಜುಬೈರ್ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 295 (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. (ಏಜೆನ್ಸೀಸ್)