ನ್ಯೂಸ್

MUDA Scam; ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್​

ಬೆಂಗಳೂರು: ಮುಡಾ (MUDA) ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ದೊಡ್ಡ ಉರುಳಾಗಿ ಪರಿಣಮಿಸಿದ್ದು, ದಿನ ಕಳೆದಂತೆ ಅವರ ಸ್ಥಾನಕ್ಕೆ ಕುತ್ತು ಹೆಚ್ಚಾಗುತ್ತಿದೆ.

ಹೈಕೋರ್ಟ್ ತೀರ್ಪಿನ ಅನುಸಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಮೈಸೂರು ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ.

ಈ ಹಗರಣ ಸಂಬಂಧ 6 ವಾರಗಳ ಒಳಗಾಗಿ ಸಿಆರ್​ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳು ನ್ಯಾಯಾಲಯ ಗಡುವು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್​ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.