ಬೆಂಗಳೂರು: (Cyclone expected on the 26th) ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೋಮವಾರ (ಅ.26) ಸೈಕ್ಲೋನ್ ಆಗಿ ರೂಪುಗೊಳ್ಳುವ ಸಾಧ್ಯತೆ ಇದೆ.
ಇದರ ಪರಿಣಾಮದಿಂದ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅ.25ರಿಂದ ಅ.29ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರಿನಲ್ಲಿ ಅ.25ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಕೊಡಲಾಗಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ ಕೋಲಾರ, ತುಮಕೂರು, ಚಿಕ್ಕಮಗಳೂರು ಮತ್ತು ಮಂಡ್ಯದಲ್ಲಿ ಭಾನುವಾರ ಜೋರು ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಕೆಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಜಾಸ್ತಿ ಇರಲಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎಂದಿನಂತೆ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.