ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರದ ಪರ ವಾದ ಮಾಡಲು ಹಿರಿಯ ವಕೀಲರಾದ ಅನಿಲ್ ಸಿ.ನಿಶಾನಿ ಮತ್ತು ಸಿದ್ಧಾರ್ಥ್ ಲೂತ್ರಾ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾಗೌಡ, ಆರ್.ನಾಗರಾಜ್, ಅನುಕುಮಾರ್, ಲಕ್ಷ್ಮಣ್, ಜಗದೀಶ್, ಪ್ರದೂಷ್ಗೆ ಹೈಕೋರ್ಟ್ ಡಿ.13ರಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.
7 ದಿನಗಳಲ್ಲಿ ಮೇಲ್ಮನವಿ ಸಲ್ಲಿಕೆ: ರಾಜ್ಯ ಸರ್ಕಾರದ ಅನುಮತಿ ಬೆನ್ನಲ್ಲೇ ಪೊಲೀಸರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಆರಂಭಿಸಿದ್ದಾರೆ. ಸರ್ಕಾರಿ ಅಭಿಯೋಜಕರ ನೆರವಿನಿಂದ ಪ್ರಕರಣದ ದೋಷಾರೋಪ ಪಟ್ಟಿಯನ್ನು ಕನ್ನಡದಿಂದ ಇಂಗ್ಲಿಷ್ಗೆ ತರ್ಜುಮೆ ಮಾಡಿಸಲು ಮುಂದಾಗಿದ್ದಾರೆ. ಇನ್ನೊಂದು ವಾರದೊಳಗೆ ದಾಖಲೆಗಳು, ಅರ್ಜಿಯನ್ನು ಸಿದ್ಧಪಡಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.