ಬಸವ ಜಯಂತಿ ಅಂಗವಾಗಿ ತಾಲೂಕು ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಶಾಸಕ ಎಚ್.ಕೆ.ಸುರೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. 
ನ್ಯೂಸ್

ಬಸವಣ್ಣರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ತೀರ್ಮಾನ

ಬೇಲೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗುರುವಾರ ತಾಲೂಕು ಕಚೇರಿಯಲ್ಲಿ ಬಸವ ಜಯಂತಿ ಅಂಗವಾಗಿ ಶಾಸಕ ಎಚ್.ಕೆ.ಸುರೇಶ್ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಬಸವಣ್ಣರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ತಾಲೂಕು ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಾಗವಹಿಸಲು ತೀರ್ಮಾನಿಸಲಾಯಿತು.

ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಬಸವಣ್ಣನವರು ಒಂದು ಜಾತಿ, ಧರ್ಮಕ್ಕೆ ಸೀಮಿತವಾದವರಲ್ಲ. ಅವರ ಸಾಮಾಜಿಕ ಕಳಕಳಿ ಮತ್ತು ಜನಪರ ಚಿಂತನೆಗಳು ನಮಗೆ ದಾರಿ ದೀಪವಾಗಿರುವುದನ್ನು ಮನಗೊಂಡು ಪ್ರಧಾನಿ ನರೇಂದ್ರ ಮೋದಿಯವರು ಪ್ರಥಮವಾಗಿ ಸಂಸತ್ ಭವನದಲ್ಲಿ ಬಸವ ಜಯಂತಿ ಆಚರಿಸಲು ಮುಂದಾಗಿದ್ದಾರೆ. ಬೇಲೂರು ಪಟ್ಟಣದಲ್ಲಿರುವ ಬಸವಣ್ಣರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ತಾಲೂಕು ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸೋಣ. ಹಾಗೂ ಮುಂದಿನ ದಿನಗಳಲ್ಲಿ ಸಮಾಜದಿಂದ ನಡೆಯಲಿರುವ ಬಸವೇಶ್ವರರ ಅದ್ದೂರಿ ಜಯಂತಿಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ತಾಲೂಕು ವೀರಶೈವ-ಲಿಂಗಾಯತ ಮಹಾಸಭಾ ಅಧ್ಯಕ್ಷ ಬಸವರಾಜು ಮಾತನಾಡಿ, ಬಸವ ಜಯಂತಿ ದಿನ ಬಹುತೇಕ ಶುಭಕಾರ್ಯಗಳು ನಡೆಯುವುದರಿಂದ ಮೊದಲು ಬಸವಣ್ಣರ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ, ತಾಲೂಕು ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುವುದು. ನಂತರ ಮೇ ತಿಂಗಳಲ್ಲಿ ಅದ್ದೂರಿಯಾಗಿ ಸಮಾಜದಿಂದ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕೆ ಸರ್ಕಾರದಿಂದ ಬರುವ ಅನುದಾನವನ್ನು ನೀಡಬೇಕು. ಸಮಾಜದವರೂ ಸಹಕಾರ ನೀಡಬೇಕು ಎಂದರು.

ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಮಾತನಾಡಿ, ಬಸವಣ್ಣನವರು ಸಮಾಜಕ್ಕೆ ನೀಡಿದ ಕೊಡುಗೆ ಗಮನಿಸಿದ ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಪ್ರಥಮ ಭಾರಿಗೆ ಸಂಸತ್‌ನಲ್ಲಿ ಜಯಂತಿ ಆಚರಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ತಹಸೀಲ್ದಾರ್ ಎಂ.ಮಮತಾ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಬಿಆರ್‌ಸಿ ಶಿವಮರಿಯಪ್ಪ, ತಾಪಂ ದಯಾನಂದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳಿದ್ದರು.