ನ್ಯೂಸ್

ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಚಾಲನೆಗೆ ನಿರ್ಧಾರ

ಬೆಂಗಳೂರು: ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಹಾಗೂ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಮತ್ತು ಪಕ್ಷದ ಸಂಘಟನೆಯ ಬಗ್ಗೆ ಜೆ.ಪಿ.ಭವನದಲ್ಲಿ ಚರ್ಚೆ ನಡೆಯಿತು.

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.

ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದು ಪಕ್ಷದ ಮುಖಂಡರಿಗೆ ಕುಮಾರಸ್ವಾಮಿ ಸಲಹೆ ನೀಡಿದರು.

ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ಬಲವರ್ಧನೆ, ಸಂಘಟನೆ ಮಾಡಲು ಒತ್ತು ನೀಡಿದ್ದೇವೆ. ಪ್ರಾದೇಶಿಕ ಪಕ್ಷ ದೇವೇಗೌಡರ ಹೋರಾಟದ ಲ. ಹಳ್ಳಿ ಹಳ್ಳಿಯಲ್ಲೂ ದೇವೇಗೌಡರು ಪಕ್ಷ ಕಟ್ಟಿದ್ದಾರೆ. ಹಾಗಾಗಿ ಕಟ್ಟ ಕಡೆಯ ಕಾರ್ಯಕರ್ತರನ್ನು ಗುರಿತಿಸಬೇಕು. ಸದಸ್ಯತ್ವ ಅಭಿಯಾನ ನಡೆಸಿ ಪಕ್ಷವನ್ನು ಬಲವರ್ಧನೆಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಸಂಸದ ಮಲ್ಲೇಶ್ ಬಾಬು, ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕರು ಮತ್ತು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.