ನ್ಯೂಸ್

ಅಯೋಧ್ಯೆ ರಾಮನ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ಘೋಷಿಸಿ: ಆರ್.‌ ಅಶೋಕ್‌

ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿಯ ರಾಮ ಮಂದಿರದಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಇರುವುದರಿಂದ ರಾಜ್ಯ ಸರ್ಕಾರವು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ಸಂಬಂಧ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ರಜೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷ ನಾಯಕ ಆರ್​ ಅಶೋಕ್​ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ವಿಪಕ್ಷ ನಾಯಕ ಆರ್.‌ ಅಶೋಕ್ ಪತ್ರದಲ್ಲೇನಿದೆ?: 500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗಿ ಜನವರಿ 22 ರಂದು ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಈ ದಿನದಂದು ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಸಂಭ್ರಮ, ಸಡಗರದ ಆಚರಣೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿಯವರು ಕೂಡ ವಿಗ್ರಹ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ್ದು, ಈಗಾಗಲೇ ಕೇಂದ್ರ ಸರ್ಕಾರದ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿದ್ದಾರೆ. ರಾಜ್ಯದಲ್ಲೂ ದೊಡ್ಡ ಮಟ್ಟದ ಆಚರಣೆ ನಡೆಯುತ್ತಿದ್ದು, ಆ ದಿನ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕು ಉಂಟಾಗಬಹುದು. ಆದ್ದರಿಂದ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸಾರ್ವಜನಿಕ ಉದ್ದಿಮೆ ಸೇರಿದಂತೆ ಎಲ್ಲ ಕಡೆಗಳಲ್ಲಿ ಅನುಕೂಲವಾಗುವಂತೆ ಜನವರಿ 22 ರಂದು ಒಂದು ದಿನದ ಮಟ್ಟಿಗೆ ಸರ್ಕಾರಿ ರಜೆಯನ್ನು ಘೋಷಿಸಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ” ಎಂದು ಆರ್.‌ ಅಶೋಕ್‌ ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.