ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಮೂರು ದಿನಗಳ ಕಾಲ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುರುವಾರ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ಉತ್ತರಾಖಂಡದಲ್ಲಿ ಸೆಪ್ಟೆಂಬರ್ 12 ರಿಂದ 14 ರವರೆಗೆ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಆದರೆ ಕೆಲ ಪ್ರದೇಶಗಳಲ್ಲಿ ಭಾರೀ ಮತ್ತು ಅತ್ಯಂತ ಭಾರೀ ಮಳೆಯಾಗಲಿದೆ. ದೆಹಲಿ ಮತ್ತು ಉತ್ತರ ಪ್ರದೇಶ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಉತ್ತರ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಥುರಾದ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಹೊರತುಪಡಿಸಿ, ಮಧ್ಯಪ್ರದೇಶದಲ್ಲಿ ಸೆಪ್ಟೆಂಬರ್ 14 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ರಾಜಸ್ಥಾನದಲ್ಲಿ ಸೆಪ್ಟೆಂಬರ್ 15 ರವರೆಗೆ ಪ್ರತ್ಯೇಕವಾದ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಗುರುವಾರ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ವಾಯುವ್ಯ ಮಧ್ಯಪ್ರದೇಶ ಮತ್ತು ಪಕ್ಕದ ನೈಋತ್ಯ ಉತ್ತರ ಪ್ರದೇಶದಲ್ಲಿ ನೆಲೆಸಿರುವ ವಾಯುಭಾರ ಕುಸಿತದಿಂದ ಈ ಮಳೆಯಾಗಿದೆ.