ಎಸ್‌ಐಆರ್ ಹೋರಾಟ ತೀವ್ರಗೊಳಿಸಲು ಇಂಡಿಯಾ ಮೈತ್ರಿಕೂಟದ ನಿರ್ಧಾರ
ರಾಹುಲ್ ಗಾಂಧಿ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ
ಹೋರಾಟ ಮುಂದುವರಿಸುವುದಾಗಿ ಮೈತ್ರಿಕೂಟದ ನಾಯಕರ ಘೋಷಣೆ
Delhi SIR Protest: ದೆಹಲಿಯಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ಇಂಡಿಯಾ ಮೈತ್ರಿಕೂಟದ ನಾಯಕರು ನಿರ್ಧರಿಸಿದ್ದಾರೆ. ಮಂಗಳವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಹೋರಾಟ ಮುಂದುವರಿಸುವುದಾಗಿ ಘೋಷಿಸಿದರು.
ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಮೈತ್ರಿಕೂಟದ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಲು ರಾಹುಲ್ ಗಾಂಧಿ ಈ ಸಭೆ ಕರೆದಿದ್ದರು.
ಕಳೆದ ನಾಲ್ಕು ದಿನಗಳಲ್ಲಿ ಇಂಡಿಯಾ ಮೈತ್ರಿಕೂಟ ಕೈಗೊಂಡ ಕಾರ್ಯಕ್ರಮಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಖರ್ಗೆ ಹೇಳಿದರು. ದೆಹಲಿಯ ಪ್ರತಿಭಟನೆಯಲ್ಲಿ ಯುವಕರು ಮತ್ತು ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಭಾಗವಹಿಸಿರುವುದು ಗಮನಾರ್ಹ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧವೂ ಟೀಕಾಪ್ರಹಾರ ನಡೆಸಿದರು.
ಇನ್ನು, ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ತೇಜಸ್ವಿ ಯಾದವ್, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಜಾರಿ ನಿರ್ದೇಶನಾಲಯ (ED), ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯಂಥ ಕೇಂದ್ರ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ದೂರಿದರು.
ಜಂತರ್ ಮಂತರ್‌ನಿಂದ ದೆಹಲಿಯ ಗಡಿಭಾಗಗಳಿಗೆ ಪ್ರತಿಭಟನಾ ಸ್ಥಳವನ್ನು ಬದಲಿಸಿರುವ ನಿರ್ಧಾರವನ್ನೂ ತೇಜಸ್ವಿ ಯಾದವ್ ಟೀಕಿಸಿದರು. ವಿರೋಧ ಪಕ್ಷಗಳ ಹೋರಾಟಕ್ಕೆ ಸರ್ಕಾರ ಹೆದರುತ್ತಿದೆ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಅವರು ಆರೋಪಿಸಿದರು.
ಇದನ್ನೂ ಓದಿ: ಟೀನೇಜ್‌ನಲ್ಲಿ ಲವ್ ಆಗೋದು ತಪ್ಪಾ?; ಪ್ರೀತಿ ಮತ್ತು ಆಕರ್ಷಣೆಯ ನಡುವಿನ ವ್ಯತ್ಯಾಸವೇನು? | Teenage Love
‘ನಾವು ಈ ಹೋರಾಟವನ್ನು ಮುಂದುವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡಿ ಗೆಲುವು ಸಾಧಿಸುತ್ತೇವೆ’ ಎಂದು ತೇಜಸ್ವಿ ಯಾದವ್ ಹೇಳಿದರು. ಮತಗಳ್ಳತನ ಮತ್ತು ಚುನಾವಣಾ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಹೊಣೆಗಾರರು ಜನರಿಗೆ ಉತ್ತರ ನೀಡಬೇಕಾಗುತ್ತದೆ ಎಂದೂ ಅವರು ಹೇಳಿದರು.