ನ್ಯೂಸ್

ಫಲಿತಾಂಶದಲ್ಲಿ ಹಿನ್ನಡೆ; ರಾಜೀನಾಮೆ ನೀಡಲು ಮುಂದಾದ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್‌!

ಮುಂಬೈ: ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯಾಗಿದೆ. ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಡಿಸಿಎಂ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ವರಿಷ್ಠರಿಗೆ ಮನವಿ ಮಾಡಿದ್ದಾರೆ. ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೀನಿ ಅಂತ ಹೇಳಿದ್ದಾರೆ. ನಾನು ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕಾಗಿ ಶ್ರಮಿಸುವ ಸಲುವಾಗಿ ನನ್ನನ್ನು ಸರ್ಕಾರದ ಜವಾಬ್ದಾರಿಯಿಂದ ಬಿಡುಗಡೆ ಮಾಡುವಂತೆ ನಾನು ಬಿಜೆಪಿ ಹೈಕಮಾಂಡ್​ಗೆ ವಿನಂತಿಸುತ್ತಿದ್ದೇನೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆ: ಮಹಾರಾಷ್ಟ್ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆ ಮಾಡಿತ್ತು. ಒಟ್ಟು 48 ಸ್ಥಾನಗಳ ಪೈಕಿ ಕಾಂಗ್ರೆಸ್ 13 ಸ್ಥಾನ ಪಡೆದಿದ್ದರೆ, ಉದ್ಧವ್ ಠಾಕ್ರೆ ಬಣದ ಶಿವಸೇನೆ 9, ಶರದ್ ಪವಾರ್ ಬಣದ ಎನ್‌ಸಿಪಿ 8, ಕಾಂಗ್ರೆಸ್ 1 ಹಾಗೂ ಇತರರು 1 ಸ್ಥಾನ ಪಡೆದಿದ್ದರು. ಏಕನಾಥ್ ಶಿಂಧೆ ಬಣದ ಶಿವಸೇನೆ 7 ಹಾಗೂ ಬಿಜೆಪಿ 7 ಸ್ಥಾನಗಳನ್ನು ಪಡೆದಿತ್ತು.

2019 ರಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿ 43 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಯುಪಿಎ ಮೈತ್ರಿ ಕೇವಲ 5 ಸ್ಥಾನ ಮಾತ್ರ ಗೆದ್ದುಕೊಂಡಿತ್ತು. ಮುಂದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ.