ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಮಾಜಿ ಸಿಎಂ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಎಂಎಲ್‌ಸಿ ಎಸ್.ರುದ್ರೇಗೌಡ ಅವರು ಪುಷ್ಪನಮನ ಸಲ್ಲಿಸಿದರು. ಡಾ. ಆರ್.ಸೆಲ್ವಮಣಿ, ಸ್ನೇಹಲ್ ಲೋಖಂಡೆ, ಜಿ.ಕೆ.ಮಿಥುನ್‌ಕುಮಾರ್, ವಿ.ರಾಜು, ಪ್ರೊ. ಬಿ.ಎಲ್.ರಾಜು, ಶೋಭಾ ಓಂಕಾರ್‌ನಾಯ್ಕ ಇದ್ದರು. 
ನ್ಯೂಸ್

ಹಿಂದುಳಿದ ಸಮುದಾಯಗಳ ಧ್ವನಿಯಾದ ದೇವರಾಜ ಅರಸು

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಧೀಮಂತ ವ್ಯಕ್ತಿತ್ವ ಹೊಂದಿದ್ದು ಇಡೀ ರಾಜ್ಯಕ್ಕೆ ಮಾದರಿ ಆಗಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹತ್ತು ಹಲವು ಜನಪರ ಯೋಜನೆ ಜಾರಿಗೊಳಿಸುವ ಮೂಲಕ ಅಭಿವೃದ್ಧಿಯ ಚಿಂತಕರಲ್ಲಿ ಅರಸು ಅವರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ಕುವೆಂಪು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮಾಜಿ ಸಿಎಂ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ನೀರಾವರಿ, ವಿದ್ಯುತ್ ಉತ್ಪಾದನೆ ಸೇರಿ ಹಲವು ರಂಗಗಳ ಅಭಿವೃದ್ಧಿಗೆ ಒತ್ತು ನೀಡಿದ್ದರು. ಹಾವನೂರು ಆಯೋಗ ರಚನೆ ಮೂಲಕ ಹಿಂದುಳಿದ ವರ್ಗಗಳನ್ನು ಮೇಲೆತ್ತುವ ಕೆಲಸ ಮಾಡಿದ ಮಹಾನ್ ಸಾಧಕ ಎಂದು ಬಣ್ಣಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗಿರುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ಬಗೆಹರಿಸಲು ಶ್ರಮಿಸಿದ್ದರು. ಧ್ವನಿಯಿಲ್ಲದ ಸಮುದಾಯಗಳಿಗೆ ಧ್ವನಿ ನೀಡಿದ ತಾತ್ವಿಕ ಮತ್ತು ಮುತ್ಸದ್ದಿ ರಾಜಕಾರಣಿ ಡಿ.ದೇವರಾಜ ಅರಸು ಅವರ ಚಿಂತನೆ, ಆಲೋಚನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುನಲ್ಲಿ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಅಡುಗೆ ಸಿಬ್ಬಂದಿಯನ್ನು ಗೌರವಿಸಲಾಯಿತು. ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ವಿ.ರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶೋಭಾ ಓಂಕಾರ್ ನಾಯ್ಕ, ಸಾಗರ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರೊ. ಬಿ.ಎಲ್.ರಾಜು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ನಗರದ ಸೈನ್ಸ್ ಮೈದಾನದಿಂದ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕುವೆಂಪು ರಂಗಮಂದಿರದಲ್ಲಿ ಸಂಪನ್ನಗೊಂಡಿತು.