ಗೋಣಿಕೊಪ್ಪಲು : ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾ ದಿನ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾವೇರಿ ಕಾಲೇಜಿನ ಹಳೆಯ ವಿದ್ಯಾರ್ಥಿ, ದಾನಿ ಭಾಗ್ಯಲಕ್ಷ್ಮೀ ಯೋಗೇಶ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಎಜುಕೇಷನ್ ಸೊಸೈಟಿ ಖಜಾಂಚಿ ಸಿ. ಡಿ. ಮಾದಪ್ಪ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳನ್ನು ದೈಹಿಕವಾಗಿ ಸದೃಢರನ್ನಾಗಿ ಮಾಡುವುದರ ಜತೆಗೆ, ಆತ್ಮವಿಶ್ವಾಸ, ಶಿಸ್ತು ಸಮಯ ಪಾಲನೆ ಕಲಿಸಿಕೊಡುತ್ತದೆ. ಒಬ್ಬ ಕ್ರೀಡಾಪಟು ಗೆದ್ದಾಗ ಸಂಭ್ರಮಿಸುವುದು ಮಾತ್ರವಲ್ಲ, ಸೋತಾಗ ಎದೆಗುಂದದೆ ಮತ್ತಷ್ಟು ಅಭ್ಯಾಸದಲ್ಲಿ ತೊಡಗಿಕೊಂಡು ಗೆಲ್ಲುವ ಛಲ ಬೆಳೆಸಿಕೊಳ್ಳಬೇಕು ಎಂದರು.
ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಕೆ.ಪಿ.ಅಚ್ಚಯ್ಯ ಮಾತನಾಡಿ, ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಕ್ರೀಡೆಯಲ್ಲಿ ತೊಡಗಿಕೊಂಡು, ದುಶ್ಚಟಗಳಿಂದ ದೂರ ಇರಬೇಕು. ಹೆತ್ತವರಿಗೆ, ಗುರು ಹಿರಿಯರಿಗೆ ಗೌರವ ನೀಡಬೇಕು. ತಾವು ವಿದ್ಯಾಭ್ಯಾಸ ಮುಗಿಸಿ ಉದ್ಯೋಗಕ್ಕೆ ಸೇರಿಕೊಂಡ ನಂತರ ತಾವು ಶಿಕ್ಷಣ ಕಲಿತ ವಿದ್ಯಾಸಂಸ್ಥೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಕ್ರೀಡೆಯಲ್ಲಿ ವಿಶ್ವವಿದ್ಯಾಲಯ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಬಹುಮಾನ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾಲೇಜು ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಿಯಪ್ಪ, ಐಕ್ಯೂಎಸಿ ಸಂಚಾಲಕಿ ಡಾ. ನಯನಾ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ. ಡಿ. ರೇಷ್ಮಾ, ಬಿ.ಎಸ್.ದೀಪ್ತಿ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ.ಸಂತೋಷ್ ಹಾಗೂ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಇದ್ದರು.