ತರೀಕೆರೆ: ಸಂಘ ಸಂಸ್ಥೆಗಳು ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಆಗ ಸಮಾಜ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು ಕನಕ ನೌಕರರ ಸಂಘದಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಸೇವಾದೀಕ್ಷೆ, ನಿವೃತ್ತ ನೌಕರರು ಮತ್ತು ಶಾಸಕರಿಗೆ ಸನ್ಮಾನ, ತಾಲೂಕು ಕುರುಬ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಕನಕಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಜನರ ಸಮಸ್ಯೆ ಅರಿತು ಕೆಲಸ ಮಾಡಬೇಕು. ವೃತ್ತಿಯಲ್ಲಿ ಶಿಸ್ತುಪಾಲನೆ, ಕಾರ್ಯದಕ್ಷತೆ ಮೂಲಕ ಹೆಸರು ಸಂಪಾದಿಸಬೇಕು. ವಿವಿಧ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಮನ್ವಯದಿಂದ ಕೆಲಸ ಮಾಡಿದರೆ ಕ್ಷೇತ್ರದ ಅಭಿವೃದ್ಧಿ ಸುಲಭವಾಗಲಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು. ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಚುನಾವಣೆ ಪೂರ್ವ ನೀಡಿದ್ದ ಭರವಸೆ ಈಡೇರಿಸುತ್ತಿದ್ದು, ಸದ್ಯದಲ್ಲೇ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದೆ. ಕ್ಷೇತ್ರದ ಜ್ವಲಂತ ಸಮಸ್ಯೆಗಳ ಅರಿವಿದ್ದು, ಶಿಕ್ಷಣ, ಆರೋಗ್ಯ ಮತ್ತು ಮೂಲ ಸೌಕರ್ಯಗಳಿಗೆ ಒತ್ತು ನೀಡಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.