ನಗರಸಭೆಯಲ್ಲಿ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಿ.ಟಿ.ವೀರೇಶ್‌ಕುಮಾರ್ ಮಾತನಾಡಿದರು. ಪೌರಾಯುಕ್ತ ಬಿ.ಸಿ.ಬಸವರಾಜ್ ಇದ್ದರು. 
ನ್ಯೂಸ್

ಅಧಿಕಾರಿಗಳೇ ಕರ್ತವ್ಯಲೋಪ ಎಸಗಿದರೆ ಶಿಸ್ತುಕ್ರಮ ನಿಶ್ಚಿತ


ಚಿಕ್ಕಮಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಕಾಲಕ್ಕೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಮಾತ್ರ ಪಾರದರ್ಶಕ ಆಡಳಿತ ನೀಡಲು ಸಾಧ್ಯ. ಕರ್ತವ್ಯಲೋಪ ಎಸಗದೆ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಿ.ಟಿ.ವೀರೇಶ್‌ಕುಮಾರ್ ಹೇಳಿದರು.
ನಗರಸಭೆಯಲ್ಲಿ ಏರ್ಪಡಿಸಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ನಗರಸಭೆ ಮತ್ತು ಪುರಸಭೆ ಕಚೇರಿಗಳಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ದೂರು ಬಂದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ಥಳೀಯ ಸಂಸ್ಥೆಗಳಿಂದ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಸಂಪೂರ್ಣ ಮಾಹಿತಿಯನ್ನು ಸಭೆಗೆ ನೀಡಬೇಕು. ಟೆಂಡರ್ ಕರೆದು 1 ವರ್ಷ ಕಳೆದರೂ ಕಾಮಗಾರಿ ಆರಂಭವಾಗಿಲ್ಲ. ಇನ್ನು ಕೆಲವು ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಕೂಡಲೇ ಗುತ್ತಿಗೆದಾರರಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಬ್ಯಾಂಕ್‌ಗಳಿಂದ ಸಾಲ ಪಡೆದು ಮನೆ ನಿರ್ಮಿಸುವವರಿಗೆ ಸರಿಯಾದ ಸಮಯಕ್ಕೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ನೀಡಬೇಕು. ವಿನಾಕಾರಣ ಕಚೇರಿಗೆ ಅಲೆದಾಡಿಸಬಾರದು. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಭೆ ಕರೆದು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ನಾಗರಿಕರ ಕೆಲಸಗಳನ್ನು ತುರ್ತಾಗಿ ಮಾಡಬೇಕು ಹಾಗೂ ನಿವೇಶನ ಖಾತೆ ಬದಲಾವಣೆ, ಇ-ಖಾತೆ ಮುಂತಾದ ಯಾವುದೇ ಕೆಲಸಗಳು ವಿಳಂಬವಾಗದಂತೆ ತ್ವರಿತವಾಗಿ ಮಾಡುವಂತೆ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಿದರು.
ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ಲಾಸ್ಟಿಕ್ ಮುಕ್ತ ಅಭಿಯಾನವನ್ನು ಜು.28ರವರೆಗೆ ಏಕಬಳಕೆ ಪ್ಲಾಸ್ಟಿಕ್ ನಿಷೇಧ, ತ್ಯಾಜ್ಯ ನಿರ್ವಹಣೆ ಕುರಿತು ಜಾಥಾ, ತರಬೇತಿ, ಜಾಗೃತಿ ಕಾರ್ಯಕ್ರಮ, ಆಂದೋಲನ ಮತ್ತು ಅಭಿಯಾನ ನಡೆಯಲಿದೆ. ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ಪರಿಸರ ಉಳಿಸಿ ಘೋಷಣೆಯೊಂದಿಗೆ ದಿನಕ್ಕೊಂದು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.