ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆಶಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಸ್ಟಾಲಿನ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ನಟ ಕಮಲ್ ಹಾಸನ್, ನಟ ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ರಾಜೇಂದ್ರ ಸಿಂಗ್ ಬಾಬು, ದುನಿಯಾ ವಿಜಯ್, ನಟಿ ರಮ್ಯಾ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದಾರೆ.
ಸಮಾರಂಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಂಡಿದ್ದರು. ಪ್ರಮಾಣವಚನ ಸ್ವೀಕರಿಸಲು ಡಿ.ಕೆ.ಶಿವಕುಮಾರ್ ವೇದಿಕೆಗೆ ಆಗಮಿಸುತ್ತಾ ಜನರತ್ತ ಕೈಬೀಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಗಳು ಡಿ.ಕೆ... ಡಿ.ಕೆ... ಡಿ.ಕೆ... ಎಂದು ಜೈಕಾರ ಕೂಗಿದರು.