ಭದ್ರಾವತಿ: ನಗರಸಭೆಯಿಂದ 10 ದಿನಗಳ ಕಾಲ ನಡೆಯಲಿರುವ ನಾಡಹಬ್ಬ ದಸರಾ ಮಹೋತ್ಸವಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ್ ಚಾಲನೆ ನೀಡಿದರು.
ದಸರಾ ಮಹೋತ್ಸವದ ಮೊದಲ ದಿನವಾದ ಗುರುವಾರ ನಗರಸಭೆ ಆವರಣದಲ್ಲಿರುವ ಶ್ರೀಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ನಂತರ ಮಾತನಾಡಿ, ಕ್ಷೇತ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ಸಮುದಾಯದ ಜನರು ಸಹಬಾಳ್ವೆಯಿಂದ ಜೀವನ ಸಾಗಿಸಬೇಕು. ನಾಡದೇವತೆ, ಶಕ್ತಿದೇವತೆ ಆಗಿರುವ ಶ್ರೀ ಚಾಮುಂಡೇಶ್ವರಿ ದೇವಿ ಅನುಗ್ರಹ ನಮ್ಮೆಲ್ಲರ ಮೇಲಿರಲಿ ಎಂದು ಆಶಿಸಿದರು.
ಕ್ಷೇತ್ರದಲ್ಲಿ ಅಭಿವೃದ್ಧಿ ನಡೆಯಬೇಕಾದರೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ನಾಗರೀಕರು ಸೇರಿದಂತೆ ಎಲ್ಲರ ಸಹಕಾರ ಅಗತ್ಯ. ಚುನಾವಣೆಗಳ ಸಂದರ್ಭದಲ್ಲಿ ರಾಜಕೀಯ ಅನಿವಾರ್ಯ. ಆದರೆ ನಂತರದ ದಿನಗಳಲ್ಲಿ ಊರಿನ ಅಭಿವೃದ್ಧಿಗೆ ಎಲ್ಲ ಪಕ್ಷಗಳ ಮುಖಂಡರೂ ದುಡಿಯಬೇಕಾಗುತ್ತದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಯಾಗಿದೆ. ಆದರೆ ಗುತ್ತಿಗೆದಾರರ ನಿರ್ಲಕ್ಷೃದಿಂದಾಗಿ ಹಲವು ಕೆಲಸಗಳು ನನೆಗುದಿಗೆ ಬಿದ್ದಿವೆ ಎಂದರು.
ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ 60 ಲಕ್ಷ ರೂ. ವೆಚ್ಚದಲ್ಲಿ ಹಲವಾರು ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ಷೇತ್ರದ ಜನರ ಸಹಕಾರ ಇದೇ ರೀತಿ ಮುಂದುವರಿಯಲಿ. ನಮ್ಮ ಕ್ಷೇತ್ರದ ಎಲ್ಲ ಇಲಾಖಾ ಅಧಿಕಾರಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ. ಆದರೆ ತಹಸೀಲ್ದಾರರು ಮಾತ್ರ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಊರಿನ ಅಭಿವೃದ್ಧಿ ದೃಷ್ಟಿಯಲ್ಲಿ ಇದು ಸರಿಯಾದ ಕ್ರಮವಲ್ಲ. ತಮ್ಮ ನಿಲುವು ಬದಲಾಯಿಸಿಕೊಂಡರೆ ಒಳ್ಳೆಯದು ಎಂದು ನಗರಸಭೆ ಸದಸ್ಯ ಬಿ.ಕೆ.ಮೋಹನ್ ಹೇಳಿದರು.
ನಗರಸಭೆ ಪ್ರಭಾರ ಅಧ್ಯಕ್ಷ ಎಂ.ಮಣಿ, ಮಾಜಿ ಅಧ್ಯಕ್ಷೆ ಲತಾ ಚಂದ್ರಶೇಖರ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ಬಿಇಒ ಎ.ಕೆ.ನಾಗೇಂದ್ರಪ್ಪ, ಚನ್ನಪ್ಪ, ಸುದೀಪ್‌ಕುಮಾರ್, ಮಣಿಶೇಖರ್, ರವಿಕುಮಾರ್, ಸಯ್ಯದ್ ರಿಯಾಜ್, ಪ್ರಭಾಕರ್, ಎಂ.ಎಸ್.ಸುಧಾಮಣಿ ರಮಾಕಾಂತ್, ನರಸಿಂಹಾಚಾರ್ ಇತರರಿದ್ದರು.