ನ್ಯೂಸ್

ಬೆಳಗಾವಿಯಲ್ಲಿ ರಾಜ್ಯೋತ್ಸವ ಆಚರಣೆಗೆ 5 ಲಕ್ಷ ರೂ.

Belagavi


ಬೆಳಗಾವಿ:ರಾಜ್ಯದ ಗಡಿಭಾಗವಾದ ಬೆಳಗಾವಿ ನಗರದಲ್ಲಿ ಅದ್ಧೂರಿ ರಾಜ್ಯೋತ್ಸವ ಆಚರಿಸಲು ಪ್ರತಿ ವರ್ಷ ಐದು ಲಕ್ಷ ರೂ. ನೀಡಲಾಗುವುದು ಎಂದು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಭರವಸೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳು, ಯೋಜನೆಗಳು ಮತ್ತು ಜಿಲ್ಲೆಯ ಗಡಿ ಭಾಗಗಳಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ಮಾತನಾಡಿದ ಅವರು,  ರಾಜ್ಯದಲ್ಲಿಯೇ ವಿಶಿಷ್ಟವಾಗಿ ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಗುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸುತ್ತಾರೆ. ರಾಜ್ಯೋತ್ಸವವನ್ನ ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅನುಕೂಲವಾಗುವಂತೆ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ 5 ಲಕ್ಷ ರೂ. ಅನುದಾನ ನೀಡಲಾಗುವುದು ಎಂದರು.
ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 2011-12 ರಿಂದ ಇಲ್ಲಿಯವರೆಗೆ ಸುಮಾರು 18 ಕೋಟಿ ರೂ.ಬಿಡುಗಡೆ ಮಾಡಲಾಗಿರುತ್ತದೆ. ಶಾಲೆಗಳ ಅಭಿವೃದ್ಧಿ, ಸಾಂಸ್ಕೃತಿಕ ಭವನಗಳ ನಿರ್ಮಾಣ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು ಈ ಅನುದಾನ ಬಿಡುಗಡೆ ಮಾಡಲಾಗಿತ್ತು. ಈ ಪೈಕಿ ಇದುವರೆಗೆ 9.27 ಕೋಟಿ ರೂ. ಹಣ ಬಳಕೆ ಪ್ರಮಾಣಪತ್ರ ಸಲ್ಲಿಸಲಾಗಿದ್ದು, ಇನ್ನುಳಿದ 8.68 ಕೋಟಿ ರೂ. ಅನುದಾನಕ್ಕೆ ಸಂಬಂಧಿಸಿದಂತೆ ಹಣ ಬಳಕೆ ಪ್ರಮಾಣಪತ್ರ ಹದಿನೈದು ದಿನಗಳ ಒಳಗಾಗಿ ಸಲ್ಲಿಸಬೇಕು.ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಕಾಮಗಾರಿಗಳು ಪೂರ್ಣಗೊಂಡಿರುವುದು ಮತ್ತು ಬಳಕೆಯನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.