ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಡಾ. ಡಿ.ಎಂ. ನಂಜುಂಡಪ್ಪ ವರದಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ವಿಚಾರವಾಗಿ ಬೀದರ್ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ವಿಚಾರಣೆಗೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸರ್ಕಾರದ ಪರ ವಕೀಲರು, ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯದಲ್ಲಿ ಈಗಾಗಲೇ ಡಾ. ಡಿ.ಎಂ. ನಂಜುಡಪ್ಪ ವರದಿ ಜಾರಿಯಲ್ಲಿದೆ. 2007-08ರಿಂದ ಈ ವರದಿ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಪ್ರತಿ ವರ್ಷ ಬಜೆಟ್‌ನಲ್ಲಿ ಹಣ ಮೀಸಲಿಡಲಾಗುತ್ತದೆ. ಅಲ್ಲದೇ ಇಂತಹದ್ದೆ ಅರ್ಜಿಯನ್ನು 20214ರಲ್ಲಿ ಸಲ್ಲಿಸಲಾಗಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಸರ್ಕಾರದ ಪರ ವಕೀಲರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ವರದಿಯ ಶಿಫಾರಸುಗಳು ಈಗಾಗಲೇ ಜಾರಿಯಲ್ಲಿವೆ ಮತ್ತು 2014ರಲ್ಲಿ ಇಂತಹದ್ದೆ ಅರ್ಜಿ ಸಲ್ಲಿಸಲಾಗಿತ್ತು. ಈ ವಿಚಾರ ಗೊತ್ತಿದ್ದೂ ಅರ್ಜಿ ಸಲ್ಲಿಸಲಾಗಿದೆ. ಇದೊಂದು ಸಲ್ಲಿಸಿದ ಅರ್ಜಿಯಾಗಿದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ದಿಗೆ ಸಂಬಂಧಿಸಿದಂತೆ ಡಾ. ಡಿ.ಎಂ. ನಂಜುಂಡಪ್ಪ ವರದಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಸಂಬಂಧ 2023ರ ಏ.10ರಂದು ಸಲ್ಲಿಸಲಾಗಿರುವ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.