ನ್ಯೂಸ್

ದಸರಾ ಮಹೋತ್ಸವ ಜನರ ಉತ್ಸವ, ವಿಜೃಂಭಣೆ, ಆಕರ್ಷಣೆ, ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ಈ ಬಾರಿ ವಿಜೃಂಭಣೆ , ಆಕರ್ಷಣೆ, ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ.

ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಳೆದ ಬಾರಿ ಬರಗಾಲದ ಕಾರಣ ಅದ್ದೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲ ಜಲಾಶಯಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ ಆಚರಿಸಲು ಮಾಡಲು ತೀರ್ಮಾನಿಸಲಾಗಿದೆ ಎಂದರು.

ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂ. ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು. ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದರು.

ಅ.3 ರಂದು ಚಾಲನೆ

ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡ ಆರಂಭಿಸಲು ಸೂಚಿಸಲಾಗಿದ್ದು, ಎಲ್ಲ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು, ಯಾವುದೇ ಮಳಿಗೆ ಖಾಲಿ ಇರದಂತೆ ನೋಡಿಕೊಳ್ಳಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ನಿರ್ದೇಶಿಸಲಾಗಿದೆ ಎಂದರು.

ಅ.3 ರಿಂದ 12ರವರೆಗೆ ಸಂಪ್ರದಾಯದಂತೆ 9 ದಿನ ಕಾರ್ಯಕ್ರಮ ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗುತ್ತದೆ. ಅ.12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯವರೆಗೆ ಜಂಬೂ ಸವಾರಿ, ನಂದಿಧ್ವಜ ಪೂಜೆ ಹಾಗೂ ಸಂಜೆ 4ರಿಂದ ಪುಷ್ಪಾರ್ಚನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

21 ದಿನ ದೀಪಾಲಂಕಾರ ವ್ಯವಸ್ಥೆ

ಪ್ರವಾಸಿಗರ ಅನುಕೂಲಕ್ಕಾಗಿ ದೀಪಾಲಂಕಾರವನ್ನು ಕಳೆದ ಬಾರಿ ಒಂದು ವಾರ ವಿಸ್ತರಣೆ ಮಾಡಲಾಗಿತ್ತು. ಈ ಬಾರಿಯೂ ದಸರಾ ನಂತರವೂ ದೀಪಾಲಂಕಾರ ಅವಧಿಯನ್ನು ವಿಸ್ತರಿಸಿ 21 ದಿನಗಳ ಕಾಲ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್ ಮಿತ್ರ ಮತ್ತು ಹೋಂ ಗಾರ್ಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಲಾಗುವುದು. ಪಾರ್ಕಿಂಗ್, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸಿದ್ಧತೆಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೈಸೂರನ್ನು ಕೇಂದ್ರವಾಗಿರಿಸಿಕೊಂಡು ಕೆಎಸ್‌ಆರ್‌ಟಿಸಿ ಸಹಯೋಗದೊಂದಿಗೆ ಪ್ರವಾಸಿ ಸರ್ಕ್ಯುಟ್ ರೂಪಿಸಲಾಗುವುದು ಎಂದು ಹೇಳಿದರು.

ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ

ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ದೀಪಾಲಂಕಾರ, ಆಹಾರ ಮೇಳ ಮತ್ತಿತರ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಆಯೋಜಿಸಬೇಕು. ಸ್ಥಳೀಯರಿಗೆ ಪ್ರೋತ್ಸಾಹ ಕೊಡಬೇಕಾಗಿರುವುದರಿಂದ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ದೊರಕಿಸಬೇಕು. ಇದೇ ವೇಳೆ ದಸರಾಕ್ಕೆ ಹೊಸ ರೂಪು ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ತಿಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹಾದೇವಪ್ಪ, ಎಚ್.ಕೆ.ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ಸಿಎಂ ತೀರ್ಮಾನಕ್ಕೆ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ತೀರ್ಮಾನಕ್ಕೆ ಸಭೆ ನೀಡಿದೆ.

ವಿದ್ಯುದ್ದೀಪಗಳಿಂದ ಝಗಮಗಿಸಲಿದೆ ಮೈಸೂರು

ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಸೋಮವಾರ ಬೆಳಕು ಭವನದಲ್ಲಿ ನಡೆದ ಸಭೆಯಲ್ಲಿ, ದಸರಾ ಉತ್ಸವ ಆರಂಭಕ್ಕೆ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 2ರಿಂದ 21 ದಿನ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ.

2024ರ ದಸರಾದಲ್ಲಿ 130 ಕಿ.ಮೀ. ರಸ್ತೆಗಳ ಉದ್ದಕ್ಕೂ ದೀಪಗಳು ಬೆಳಗಲಿವೆ. 84 ವೃತ್ತಗಳು, ಉದ್ಯಾನವನ ಸೇರಿ ಪ್ರಮುಖ 64 ಸ್ಥಳಗಳಲ್ಲಿ ವಿದ್ಯುತ್ ದೀಪಗಳು ಕಂಗೊಳಿಸಲಿವೆ. ಹಸಿರು ಚಪ್ಪರ, ಸುಸ್ವಾಗತ, ವಿವಿಧ ಕಮಾನುಗಳು, ನಿಗಮದ ಕಚೇರಿಗಳ ದೀಪಾಲಂಕಾರ, ಛಾಯಾಗ್ರಹಣ ಮತ್ತು ಸಮಾರಂಭಗಳ ವೇದಿಕೆ ಮತ್ತಿತರೆಡೆ ವಿದ್ಯುತ್ ದೀಪಾಲಾಂಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ ಸೇರಿ ಹಿರಿಯ ಅಧಿಕಾರಿಗಳು ಇದ್ದರು.