ನ್ಯೂಸ್

ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜು.3 ರವರೆಗೆ ವಿಸ್ತರಿಸಿದ ಕೋರ್ಟ್

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ವಿಸ್ತರಿಸಿದೆ. ಇದರಿಂದ ಕೇಜ್ರಿವಾಲ್‌ ಜೈಲುವಾಸ ಮುಂದುವರಿದಂತಾಗಿದೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್‌ ಕೇಜ್ರಿವಾಲ್‌ 100 ಕೋಟಿ ರೂಪಾಯಿ ಲಂಚ ಕೇಳಿರುವುದಕ್ಕೆ ಪುರಾವೆ ಇದ್ದಿರುವುದಾಗಿ ಜಾರಿ ನಿರ್ದೇಶನಾಲಯ ಬುಧವಾರ (ಜೂನ್‌ 19) ರೋಸ್‌ ಅವೆನ್ಯೂ ಕೋರ್ಟ್‌ ಗೆ ತಿಳಿಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಲ್ಲಿಸಲಾದ ಆರೋಪಪಟ್ಟಿಯನ್ನು ನ್ಯಾಯಾಲಯ ಪರಿಗಣಿಸಿರುವುದಾಗಿ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌ ವಿ ರಾಜು ಅವರು ತಿಳಿಸಿದ್ದಾರೆ.

ಕೇಜ್ರಿವಾಲ್‌ ಬಂಧನಕ್ಕೂ ಮೊದಲೇ ಸಾಕ್ಷ್ಯಾಧಾರಗಳನ್ನು ಸಂಗ್ರಹ: ಮೇಲ್ನೋಟದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಇದೊಂದು ಅಕ್ರಮ ಹಣ ವರ್ಗಾವಣೆ ಪ್ರಕರಣ ಎಂಬುದು ಕೋರ್ಟ್‌ ಪರಿಗಣಿಸಿದೆ. ಸಿಬಿಐ ತನಿಖೆಯಲ್ಲೂ ಕೇಜ್ರಿವಾಲ್‌ 100 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನ್ನ ಬಹಿರಂಗಪಡಿಸಿದೆ. ನಾವು ಕೇಜ್ರಿವಾಲ್‌ ಬಂಧನಕ್ಕೂ ಮೊದಲೇ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದೇವು ಎಂದು ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ರಾಜು ಅವರು ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ ಸಹ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದು ನ್ಯಾಯಾಲಯವು ಅಕ್ರಮ ಹಣ ವರ್ಗಾವಣೆಯ ಆರೋಪವನ್ನು ಸ್ವೀಕರಿಸುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಏನಿದು ಪ್ರಕರಣ?: ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು.