ಬೆಂಗಳೂರು:ಶಾಸಕ(MLA) ಮುನಿರತ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬಿಜೆಪಿ ಶಾಸಕರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಗೂಂಡಾಗಳಿಂದ ದಾಳಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ವಿಜಯೇಂದ್ರ, ''ಕಾಂಗ್ರೆಸ್ ಸರ್ಕಾರದಲ್ಲಿ ಜನಪ್ರತಿನಿಧಿಗಳಿಗೆ ರಕ್ಷಣೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕೈಗೆತ್ತಿಕೊಂಡಿರುವ ಗೂಂಡಾಗಳು ಬಿಜೆಪಿ ಶಾಸಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಶಾಸಕ ಸಿ.ಟಿ ರವಿ ಮೇಲೆ ನಡೆದ ಹಲ್ಲೆಯ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿರುವ ಸರ್ಕಾರದ ಧೋರಣೆಯಿಂದ ಪ್ರೇರಣೆ ಪಡೆದಿರುವ ಕಾಂಗ್ರೆಸ್ ಗೂಂಡಾಗಳು ಇದೀಗ ನಮ್ಮ ಶಾಸಕ ಮುನಿರತ್ನ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ಅತ್ಯಂತ ಹ್ಯೇಯಕರ ಹಾಗೂ ಖಂಡನೀಯ'' ಎಂದಿದ್ದಾರೆ.
ಜನರಿಗೆ ರಕ್ಷಣೆ ನೀಡಬೇಕಾದ ಜನಪ್ರತಿನಿಧಿಗಳಿಗೇ ರಕ್ಷಣೆ ಇಲ್ಲವೆಂದರೆ ಸಾಮಾನ್ಯ ಜನರ ಪಾಡೇನು ಎಂಬ ಆತಂಕ ಉಲ್ಬಣಗೊಳ್ಳುತ್ತಿದೆ. ಸಾಮಾಜಿಕ ಸುಭದ್ರತೆಯಿಲ್ಲದ ಅರಾಜಕತೆಯ ರಾಜ್ಯವನ್ನು ನಿರ್ಮಿಸಲು ಕಾಂಗ್ರೆಸ್ ಹೊರಟಂತಿದೆ. ಶಾಸಕ ಮುನಿರತ್ನ ಅವರ ಮೇಲೆ ಆಪಾದನೆಗಳೇನೇ ಇರಲಿ ಅದಕ್ಕೆ ನ್ಯಾಯದ ಪರಿಧಿಯಲ್ಲಿ ಉತ್ತರ ಸಿಗುತ್ತದೆ. ಆದರೆ, ಜನರಿಂದ ಆಯ್ಕೆಯಾದ ಶಾಸಕರೊಬ್ಬರನ್ನು ಹಾಡು ಹಗಲಲ್ಲೇ ಹತ್ಯೆ ಮಾಡುವ ಸಂಚುರೂಪಿಸಿ ಹಲ್ಲೆ ನಡೆಸುವ ಪರಿಸ್ಥಿತಿ ಉದ್ಭವಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.
ಕಾನೂನು ಸುವ್ಯವಸ್ಥೆಯು ಸಂಪೂರ್ಣ ಆದೋಗತಿಗೆ ಇಳಿದಿರುವ ಪರಿಸ್ಥಿತಿಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಹೋರಾಟ ಕೈಗೆತ್ತಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುನಿರತ್ನ ಅವರ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ತೇಪೆ ಸಾರಿಸಲು ಪ್ರಯತ್ನಿಸಿದರೆ ತಕ್ಕನಾದ ಉತ್ತರ ಎದುರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಿದ್ಧವಾಗಿರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.