ಸೊರಬ ತಾಲೂಕಿನ ಕಮರೂರು ಗ್ರಾಮದಲ್ಲಿ ಏರ್ಪಡಿಸಿದ್ದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟವನ್ನು ಬೆನ್ನೂರು ಗ್ರಾಪಂ ಅಧ್ಯಕ್ಷೆ ಶಿಲ್ಪಾ ಉದ್ಘಾಟಿಸಿದರು. ಡಾ. ಎಚ್.ಇ.ಜ್ಞಾನೇಶ್, ಎಚ್.ಗಣಪತಿ, ಪರಮೇಶ್ವರ್, ಜಯಶೀಲ ಗೌಡ ಇತರರಿದ್ದರು. 
ನ್ಯೂಸ್

ಗ್ರಾಮೀಣ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ

ಸೋಮಶೇಖರ ಎನ್

ಸೊರಬ: ಸರ್ಕಾರ ದೇಶೀಯ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಿದಾಗ ಗ್ರಾಮೀಣ ಭಾಗದ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಬೆನ್ನೂರು ಗ್ರಾಪಂ ಅಧ್ಯಕ್ಷೆ ಶಿಲ್ಪಾ ಹೇಳಿದರು.

ತಾಲೂಕಿನ ಕಮರೂರು ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಕಸಬಾ ಬಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಕ್ರೀಡೆಯಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು ಸಾಧ್ಯ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಅನೇಕ ಕ್ರೀಡಾಪಟುಗಳು ದೇಶ ಪ್ರತಿನಿಧಿಸುವ ಸಾಮರ್ಥ್ಯ ಹೊಂದಿದ್ದಾರೆ. ಅವರಿಗೆ ಪ್ರೋತ್ಸಾಹ ಮತ್ತು ಸಹಕಾರದ ಅಗತ್ಯವಿದೆ. ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನಗಳನ್ನು ಜ್ಞಾನಾರ್ಜನೆಗೆ ಬಳಸಬೇಕು ಎಂದು ಸಲಹೆ ನೀಡಿದರು.

ದಂತವೈದ್ಯ ಡಾ. ಎಚ್.ಇ.ಜ್ಞಾನೇಶ್ ಮಾತನಾಡಿ, ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ. ವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದಕ್ಕೂ ಆದ್ಯತೆ ನೀಡಬೇಕು ಎಂದರು. ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಚ್.ಗಣಪತಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪರಮೇಶ್ವರ್ ಮಣ್ಣೆತ್ತಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಜಯಶೀಲಗೌಡ, ದೈಹಿಕ ಶಿಕ್ಷಣ ಪರೀವೀಕ್ಷಕ ಲಿಂಗರಾಜ್ ಒಡೆಯರ್, ಮಾರ್ಯಪ್ಪ, ಸುನಿಲ್ ಗೌಡ ಇತರರಿದ್ದರು.