ನ್ಯೂಸ್

ಅರಣ್ಯ ವ್ಯಾಪ್ತಿ ಜಮೀನು ಒತ್ತುವರಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ತೀರ್ಥಹಳ್ಳಿ ತಾಲೂಕಿನ ಕಸಬ ಹೊಬಳಿಯ ಆಲಗೇರಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳಿಂದ ಉಂಟಾಗಿರುವ ಸುಮಾರು 10 ಗುಂಟೆ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪ್ರಕರಣ ಸಂಬಂಧ ಗ್ರಾಮಸ್ಥ ಜಿ.ವಿ ಚಂದ್ರಶೇಖರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎನ್. ವಿ ಅಂಜಾರೀಯಾ ಹಾಗೂ ನ್ಯಾಯಮೂರ್ತಿ ಕೆ. ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಸರ್ಕಾರ, ತೀರ್ಥಹಳ್ಳಿ ತಾಲೂಕು ತಹಸೀಲ್ದಾರ್, ಆಗುಂಬೆ ವಲಯ ಮೇಗರವಳ್ಳಿ ಅರಣ್ಯಾ ಸಂರಕ್ಷಣಾ ಅಧಿಕಾರಿ, ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಇವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜು.10ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು , ಅಲಗೇರಿ ಗ್ರಾಮದಲ್ಲಿ ಸ.ನಂ 16 ರಲ್ಲಿನ ಸರ್ಕಾರಿ ಸೊಪ್ಪಿನ ಬೆಟ್ಟ ಹಾಗೂ ಕಿರು ಅರಣ್ಯಕ್ಕೆ ಸೇರಿದ ಜಾಗದ 10 ಗುಂಟೆ ಜಾಗವನ್ನು ಗ್ರಾಮಸ್ಥ ಉಮಾಪತಿ ಎ.ಎಸ್. ಬಿನ್ ಶೇಷಾದ್ರಯ್ಯ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ.

ಜಾಗದ ಸುತ್ತಲೂ ತಂತಿ ಬೇಲಿ ನಿರ್ಮಿಸಲಾಗಿದೆ.

ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಒತ್ತುವರಿ ತೆರವುಗೊಳಿಸಲು ಕೋರಿ ಆಗುಂಬೆ ವಲಯಾ ಅರಣ್ಯಾಧಿಕಾರಿಗೆ , ತಹಸೀಲ್ದಾರ್ ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕ್ಷಾೃಧಾರಗಳ ಸಮೇತ ದೂರು ನೀಡಲಾಗಿತ್ತು. ಆದರೆ ಈವರೆಗೂ ಒತ್ತುವರಿ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅಲ್ಲದೆ, ಪ್ರಕರಣದಲ್ಲಿ ನಡೆದಿರುವ ಸರ್ಕಾರಿ ಜಮೀನಿನ ಒತ್ತುವರಿಯನ್ನು ತೆರವುಗೊಳಿಸುವ ಮೂಲಕ ಸರ್ಕಾರದ ಜಮೀನು ರಕ್ಷಣೆ ಮಾಡಬೇಕು ಮತ್ತು ಒತ್ತುವರಿದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.