ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಆಗಸ್ಟ್ 27 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು.
ಇದಕ್ಕೂ ಮೊದಲು ಆಗಸ್ಟ್ 14ರಂದು ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು. ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಮನವಿಯ ಬಗ್ಗೆ ತನಿಖಾ ಸಂಸ್ಥೆಯಿಂದ ಪ್ರತಿಕ್ರಿಯೆಯನ್ನು ಕೋರಿತು. ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೂರು ಬಾರಿ ಮಧ್ಯಂತರ ಜಾಮೀನು ಪಡೆದಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಾಮೀನು ನೀಡಲು ಕಠಿಣ ಷರತ್ತುಗಳನ್ನು ವಿಧಿಸಲಾಗಿದೆ.
55 ವರ್ಷದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ತಿಹಾರ್ ಜೈಲಿನಿಂದ ಸಿಬಿಐ ಬಂಧಿಸಿತ್ತು. ಅಲ್ಲಿ ಅವರು ಜಾರಿ ನಿರ್ದೇಶನಾಲಯ ದಾಖಲಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.