ನ್ಯೂಸ್

ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಇಬ್ಬರು ಸಜೀವ ದಹನ| Blast in firecracker

Blast in firecracker: ಉತ್ತರ ಪ್ರದೇಶದ ಲಕ್ನೋದ ಗುಡಂಬಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಜೀವ ದಹನ ಆಗಿದ್ದಾರೆ ಎಂದು ಭಾನುವಾರ (ಆಗಸ್ಟ್ 31) ವರದಿಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಹಾಯಕ ಪೊಲೀಸ್ ಆಯುಕ್ತ ಅನಿಂದ್ಯ ವಿಕ್ರಂ ಸಿಂಗ್, "ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ" ಎಂದು ಹೇಳಿದ್ದಾರೆ.

ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದು ಬಿದ್ದಿದ್ದು, ಕನಿಷ್ಠ ಇಬ್ಬರು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ, ಆಂಬ್ಯುಲೆನ್ಸ್‌ಗಳು ಮತ್ತು ಸ್ಥಳೀಯ ಪೊಲೀಸರನ್ನು ಒಳಗೊಂಡ ರಕ್ಷಣಾ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯವನ್ನು ಕೈಗೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.

ಘಟನೆ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸಲು ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪುವಂತೆ ಅವರು ಸೂಚನೆ ನೀಡಿದ್ದಾರೆ. (ಏಜೆನ್ಸೀಸ್)