ನ್ಯೂಸ್

ಸುಳ್ಳು ಜಾತಿ ಪ್ರಮಾಣಪತ್ರ ವಿತರಣೆ ಪ್ರಕರಣ: ಸರ್ಕಾರದಿಂದ ವಸ್ತು ಸ್ಥಿತಿ ವರದಿ ಕೇಳಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣತ್ರಗಳನ್ನು ಪಡೆದುಕೊಂಡವರ ಹಾಗೂ ಅವುಗಳನ್ನು ವಿತರಿಸಿದವರ ವಿರುದ್ಧ ಏನೆಲ್ಲ ಕ್ರಮ ಜರುಗಿಸಲಾಗಿದೆ ಎಂಬ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರಾಜ್ಯ ಎಸ್ಸಿ-ಎಸ್ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಹಾಗೂ ನ್ಯಾ. ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ನಡೆಸಿತು.

ಅರ್ಜಿದಾರರ ಪರ ವಕೀಲೆ ಅಶ್ವಿನಿ ಓಬಳೇಶ್ ವಾದ ಮಂಡಿಸಿ, ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡವರ ಹಾಗೂ ಅದಕ್ಕೆ ಕಾರಣರಾದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಈ ಹಿಂದೆ ಹೈಕೋರ್ಟ್ ಆದೇಶಿಸಿತ್ತು. ಅದರಂತೆ, ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ನಿರ್ದೇಶಕರು ನ್ಯಾಯಾಲಯಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಬೇಕಿತ್ತು. ಆದರೆ ಈವರೆಗೆ ವರದಿ ಸಲ್ಲಿಸಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅದಕ್ಕೆ ಸರ್ಕಾರದ ಪರ ವಕೀಲರು, ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಶೇಷ ವಕೀಲರನ್ನು ಈಗಷ್ಟೇ ನೇಮಕ ಮಾಡಲಾಗಿದೆ. ಆದೇಶದಂತೆ ವರದಿ ಸಲ್ಲಿಸಲು ಕಾಲಾವಕಾಶಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿತು.