ನ್ಯೂಸ್

ತೊಗರಿ ಹೆಚ್ಚುವರಿ ಬೆಂಬಲ ಬೆಲೆಗೆ ಎಫ್‌ಡಿ ಅನುಮೋದನೆ|Toor Dal

Bengaluru - Political - Vilas Melagiri

ಬೆಂಗಳೂರು: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ. ನೀಡಲು ನಿರ್ಧರಿಸಿದ್ದು, ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ(FD approval for Toor Dal Additional Support Price) ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್(Shivanand Patil) ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕ್ವಿಂಟಾಲ್‌ಗೆ 7,550 ರೂ. ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ಕೂಡ ಪ್ರತಿ ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ. ನೀಡಲಿದೆ. ಹೀಗಾಗಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡುವ ರೈತರಿಗೆ ಕ್ವಿಂಟಾಲ್‌ಗೆ 8000 ರೂ. ನೀಡಲಾಗುವುದು. ರಾಜ್ಯ ಸರ್ಕಾರದ ಈ ಉದ್ದೇಶಕ್ಕೆ 140 ಕೋಟಿ ರೂ. ಒದಗಿಸಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಕಡಿಮೆಯಾಗಿದ್ದು, ಹೆಚ್ಚಳ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದರು. ಈ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದು ರಾಜ್ಯದಿಂದ ಹೆಚ್ಚುವರಿ ಬೆಂಬಲ ಬೆಲೆ ನೀಡಬೇಕು ಎಂದು ಕೋರಿದಾಗ ಮನವಿಗೆ ಸ್ಪಂದಿಸಿದರು. ಹೀಗಾಗಿ ಪ್ರತಿ ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ. ಕೊಡುವ ನಿರ್ಧಾರ ಕೈಗೊಳ್ಳಲಾಯಿತು. ಇದೇ ಮೊದಲ ಬಾರಿಗೆ 8000 ರೂ. ಧಾರಣಿಯಲ್ಲಿ ತೊಗರಿ ಖರೀದಿ ಮಾಡಲಾಗುತ್ತಿದೆ. ಇದುವರೆಗೆ 5800 ರೂ. ಧಾರಣಿಯಲ್ಲಿ ಖರೀದಿ ಮಾಡಲಾಗುತ್ತಿತ್ತು ಎಂದು ತಿಳಿಸಿದ್ದಾರೆ.

ಕಲಬುರಗಿ, ಬೀದರ್‌, ಯಾದಗಿರಿ, ರಾಜಚೂರು, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ಬೆಳಗಾವಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಈಗಾಗಲೇ ಖರೀದಿ ಪ್ರಕ್ರಿಯೆ ಆರಂಭವಾಗಿದೆ.

ಶೇಂಗಾ ಖರೀದಿ ಅವಧಿ ವಿಸ್ತರಣೆ

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಅವಧಿಯನ್ನು ಫೆ. 15ರವರೆಗೆ ವಿಸ್ತರಣೆ ಮಾಡಲಾಗಿದೆ . ನೋಂದಣಿ ಮಾಡಿಕೊಂಡಿರುವ ರೈತರು ಇನ್ನೂ ಮಾರಾಟ ಮಾಡಲು ಸಾಧ್ಯವಾಗಿಲ್ಲ ಎಂಬ ಹಿನ್ನೆಲೆಯಲ್ಲಿ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.