ಜಿಪಂ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಗುರುದತ್ತ ಹೆಗಡೆ, ಎನ್.ಹೇಮಂತ್, ಅಪರ್ಣಾ ಎಂ. ಕೊಳ್ಳ, ವೆಂಕಟೇಶ್, ಶಶಿಧರ ಕೋಸಂಬೆ, ಡಾ. ಕೆ.ಟಿ.ತಿಪ್ಪೇಸ್ವಾಮಿ, ಮಂಜು ಇತರರಿದ್ದರು.  
ನ್ಯೂಸ್

ಬಾಲ್ಯವಿವಾಹಗಳಿಗೆ ಎಫ್‌ಐಆರ್ ದಾಖಲಿಸಿ

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆದಿರುವ ಬಾಲ್ಯವಿವಾಹಗಳಿಗೆ ಸಂಬಂಧಿಸಿದ ಅಷ್ಟೂ ಪ್ರಕರಣಗಳಿಗೆ ಎಫ್‌ಐಆರ್ ದಾಖಲಿಸಬೇಕು. ಬಾಲಗರ್ಭಿಣಿಯರಿಗೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಾಲ್ಯ ವಿವಾಹಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾತ್ರವಲ್ಲದೆ ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಕರು, ಪೊಲೀಸರು ಸೇರಿ ಸಂಬಂಧಪಟ್ಟವರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಮೊದಲ ಹಂತದಲ್ಲಿ ಬಾಲ್ಯ ವಿವಾಹದ ಬಗ್ಗೆ ಜಾಗೃತಿ ಮೂಡಿಸುವ ಹೊಣೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರಿಗೆ ಹೆಚ್ಚಿರುತ್ತದೆ. ಬಾಲ್ಯ ವಿವಾಹದ ಕುರಿತು ವಿವೇಕ ಹೇಳುವುದಕ್ಕಿಂತ ಶಿಕ್ಷೆಯ ತೀವ್ರತೆ, ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ಕುರಿತು ಮೊದಲೇ ಮಾಹಿತಿ ನೀಡುವವರಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಈ ಬಗ್ಗೆ ಹೆಚ್ಚಿನ ಪ್ರಚಾರದ ಅಗತ್ಯವಿದೆ ಎಂದರು.

ಡಿಸಿ ಗುರುದತ್ತ ಹೆಗಡೆ, ಜಿಪಂ ಸಿಇಒ ಎನ್.ಹೇಮಂತ್, ಆಯೋಗದ ಸದಸ್ಯರಾದ ವೆಂಕಟೇಶ್, ಡಾ. ಕೆ.ಟಿ.ತಿಪ್ಪೇಸ್ವಾಮಿ, ಶಶಿಧರ್ ಕೋಸಂಬೆ, ಮಂಜು, ಅಪರ್ಣಾ ಎಂ. ಕೊಳ್ಳ, ಶೇಖರೇಗೌಡ ಜಿ. ರಾಮತ್ನಾಳ ಉಪಸ್ಥಿತರಿದ್ದರು.