Fire accident : ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತದಲ್ಲಿ ಭೀಕರ ದುರಂತ ಸಂಭವಿಸಿದೆ. ಬುರ್ರಬಜಾರ್ ಪ್ರದೇಶದ ಫಲ್ಪಟ್ಟಿ ಮಚುವಾ ಹಣ್ಣಿನ ಮಾರುಕಟ್ಟೆಯ ಬಳಿ ಇರುವ ರುತುರಾಜ್ ಹೋಟೆಲ್ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 14 ಮಂದಿ ಸಜೀವ ದಹನವಾಗಿದ್ದಾರೆ. ಅಲ್ಲದೆ, ಹಲವರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕೋಲ್ಕತ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಈ ಅವಘಡ ಮಂಗಳವಾರ ರಾತ್ರಿ 8.15 ಕ್ಕೆ ಈ ಘಟನೆ ನಡೆದಿದೆ. ಸದ್ಯಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಇಲ್ಲಿಯವರೆಗೆ 14 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಆದರೆ, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ.
ಅಪಘಾತದ ಬಗ್ಗೆ ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಪ್ರತಿಕ್ರಿಯಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಗ್ನಿಶಾಮಕ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದರು. ಸಂತ್ರಸ್ತರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಅಲ್ಲದೆ, ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ.
ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಶುಭಂಕರ್ ಸರ್ಕಾರ್, ಕೋಲ್ಕತ ಕಾರ್ಪೊರೇಷನ್ ನಡವಳಿಕೆಯನ್ನು ಟೀಕಿಸಿದ್ದಾರೆ. ಸುರಕ್ಷತಾ ಮಾನದಂಡಗಳನ್ನು ಪಾಲಿಸದೆ ನಿಗಮ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. (ಏಜೆನ್ಸೀಸ್)