ನಂಜನಗೂಡು: ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂಬ ಹಿರಿಮೆಯನ್ನು ಹೊಂದಿರುವ ಪತ್ರಿಕೋದ್ಯಮದ ಮೂಲಕ ಸಮಾಜದಲ್ಲಿ ಕಂಡುಬರುವ ನ್ಯೂನತೆಗಳು ಬೆಳಕಿಗೆ ಬರುತ್ತವೆ. ಜತೆಗೆ ಜನರ ಆಶೋತ್ತರಗಳಿಗೆ ಪೂರಕವಾಗಿ ಸ್ಪಂದಿಸುವ ಕಾರ್ಯ ನಡೆಯುತ್ತಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಅಭಿಪ್ರಾಯಪಟ್ಟರು.
ನಗರದ ಶ್ರಾವಣ ಕಲ್ಯಾಣ ಮಂಟಪದಲ್ಲಿ ತಾಲೂಕು ಪತ್ರಕರ್ತರ ಸಂಘದಿಂದ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಮಾಧ್ಯಮದ ಮೂಲಕ ಸಮಾಜದಲ್ಲಿ ಕಂಡು ಬರುವ ಸಾಮಾಜಿಕ ಸಮಸ್ಯೆಗಳು ಬೆಳಕಿಗೆ ಬರುತ್ತಿವೆ. ಬದಲಾದ ಕಾಲಘಟ್ಟದಲ್ಲಿ ನವೀನ ತಂತ್ರಜ್ಞಾನಗಳ ಉಪಯೋಗ ಹಾಗೂ ಕೃತಕ ಬುದ್ಧಿಮತ್ತೆಯಂತಹ ಸವಾಲುಗಳ ನಡುವೆಯೂ ಮುದ್ರಣ ಮಾಧ್ಯಮ ಈಗಲೂ ತನ್ನ ವಿಶ್ವಾಸಾರ್ಹತೆ ಉಳಿಸಿಕೊಂಡಿದೆ. ಇನ್ನು ಪತ್ರಿಕೋದ್ಯಮದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುವ ಪತ್ರಕರ್ತರನ್ನು ಜೆಎಸ್‌ಎಸ್ ಸಂಸ್ಥೆಯವರು ಗುರುತಿಸಿ ಗೌರವಿಸುವ ಮೂಲಕ ಅವರ ವೃತ್ತಿ ಕಾರ್ಯಕ್ಷಮತೆ ಹೆಚ್ಚಾಗಲು ನೆರವಾಗಿದ್ದಾರೆ. ಹೀಗಾಗಿ ಜೆಎಸ್‌ಎಸ್ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜೆಎಸ್‌ಎಸ್ ಸಂಸ್ಥೆಗಳ ಗೌರವ ಸಹಾಯಕ ಆಡಳಿತಾಧಿಕಾರಿ ಎಸ್.ಪಿ.ಉದಯ ಶಂಕರ್ ಮಾತನಾಡಿ, ನಂಜನಗೂಡು ತಾಲೂಕು ಪತ್ರಕರ್ತರ ಸಂಘದಲ್ಲಿ ಸುತ್ತೂರು ಮಠದಿಂದ ದತ್ತಿನಿಧಿಯನ್ನು ಸ್ಥಾಪಿಸಿ 2011ರಿಂದ ಮಾಧ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, 2023ನೇ ಸಾಲಿನ ಪ್ರಶಸ್ತಿ ಸುತ್ತೂರಿನವರೇ ಆದ ನಂಜುಂಡನಾಯಕ ಅವರಿಗೆ ಲಭ್ಯವಾಗಿರುವುದು ಸಂತಸದ ಸಂಗತಿಯಾಗಿದೆ. ಮುಂಬರುವ ದಿನಗಳಲ್ಲಿ ಅವರು ಮಾಧ್ಯಮ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸೇವೆ ಸಲ್ಲಿಸುವ ಮೂಲಕ ಸಮಾಜಕ್ಕೆ ಕೊಡುಗೆಯನ್ನು ನೀಡಲಿ ಎಂದು ತಿಳಿಸಿದರು.
ಇದೇ ಸಂದರ್ಭ ಹಿರಿಯ ಪತ್ರಕರ್ತ ಸುತ್ತೂರು ನಂಜುಂಡನಾಯಕ ಅವರಿಗೆ ಜೆಎಸ್‌ಎಸ್ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಸುತ್ತೂರು ಜೆಎಸ್‌ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ಜಿ.ಎಲ್.ತ್ರಿಪುರಾಂತಕ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಎಂ.ಎಸ್.ಸತ್ಯನಾರಾಯಣ್ ಸೇರಿದಂತೆ ಪತ್ರಕರ್ತರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.