ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ(Strict action against those responsible for consuming food poisoning at a private residential educational institution in T.Kagepura) ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಸೂಚಿಸಿದ್ದಾರೆ.
ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಬೇಕು. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ತಾಕೀತು ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಟಿ.ಕಾಗೇಪುರದ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಇದರಿಂದ ನನಗೆ ಬಹಳ ನೋವುಂಟಾಗಿದೆ. ಮತ್ತೆ ಇಂಥ ಘಟನೆಗಳು ಮರುಕಳಿಸದಿರಲಿ. ಘಟನೆ ಬಗ್ಗೆ ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕೆಂದು ಸೂಚಿದ್ದೇನೆ.
-ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ.